ಉಡುಪಿ: ಕರಾವಳಿ ಜನತೆಗೆ ಪ್ರಧಾನಿ ನರೇಂದ್ರ ಮೋದಿ ನೇತತ್ವದ ಕೇಂದ್ರ ಸರಕಾರ ಕೊಡುಗೆಯಾಗಿ ನೀಡಿರುವ ಮಂಗಳೂರು ಮಡಗಾಂವ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಪ್ರಥಮ ಪ್ರಯಾಣ ಹಿನ್ನೆಲೆಯಲ್ಲಿ ಡಿಸೆಂಬರ್ 30 ರಂದು ಉಡುಪಿಯಲ್ಲಿ ಅದ್ದೂರಿ ಸ್ವಾಗತ ಸಮಾರಂಭ ಆಯೋಜಿಸಿರುವುದಾಗಿ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.
ಕರಾವಳಿ ಭಾಗದ ಬಹುದಿನಗಳ ಬೇಡಿಕೆಯಾಗಿದ್ದ ವಂದೇ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿಯವರು ವರ್ಚುವಲ್ ಆಗಿ ಚಾಲನೆ ನೀಡಲಿದ್ದು, ಮಧ್ಯಾಹ್ನ 12 ಗಂಟೆಗೆ ಉಡುಪಿ ರೈಲ್ವೇ ನಿಲ್ದಾಣದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಸಚಿವರಾದ ಶೋಭಾ ಕರಂದ್ಲಾಜೆ ಯವರ ಉಪಸ್ಥಿತಿಯಲ್ಲಿ ಸ್ವಾಗತ ಕಾರ್ಯಕ್ರಮ ನಡೆಯಲಿದೆ.
ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಮಂಜೂರುಗೊಳಿಸುವ ಮೂಲಕ ಕರಾವಳಿ ಜಿಲ್ಲೆಯ ಪ್ರವಾಸೋದ್ಯಮ, ಮೀನುಗಾರಿಕೆ, ಶೈಕ್ಷಣಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಿದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ರೈಲ್ವೇ ಸಚಿವರಾದ ಅಶ್ವಿನ್ ವೈಷ್ಣವ್ ಹಾಗೂ ವಿಶೇಷ ಮುತುವರ್ಜಿ ವಹಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದರಾದ ನಳಿನ್ ಕುಮಾರ್ ಕಟೀಲ್, ಬಿ. ವೈ. ರಾಘವೇಂದ್ರ, ಅನಂತ್ ಕುಮಾರ್ ಹೆಗಡೆ ಯವರಿಗೆ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ