ಬೆಳಗಾವಿ: ಲೋಕಸಭೆ ಚುನಾವಣೆಯಲ್ಲಿ ತನಗೆ ಟಿಕೆಟ್ ತಪ್ಪಿಸಲು ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲಿ ಪಿತೂರಿ ನಡೆಯುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮವರು ವಿರೋಧ ಮಾಡುತ್ತಿರುವ ಕಾರಣಕ್ಕೆ ನನಗೆ ಅನುಕೂಲ ಆಗಿದೆ. ಯಾವಾಗ ವಿರೋಧ ವ್ಯಕ್ತವಾಗುತ್ತದೆಯೋ ಆಗಲೇ ನಮ್ಮ ನಾಯಕರು ನಮ್ಮ ಬಗ್ಗೆ ಮಾಹಿತಿ ಕಲೆ ಹಾಕುತ್ತಾರೆ. ಇಲ್ಲವಾದರೆ ಶೋಭಾ ಒಳ್ಳೆಯ ಕೆಲಸ ಮಾಡ್ತಿದ್ದಾರೆ, ಪಕ್ಷದ ಕೆಲಸ ಮಾಡುತ್ತಾರೆ ಎಂದಷ್ಟೇ ಹೇಳುತ್ತಿದ್ದರು ಎಂದರು.
ಶೋಭಾರನ್ನು ಏಕೆ ವಿರೋಧ ಮಾಡ್ತಿದ್ದಾರೆ ಎಂದು ಪಕ್ಷದ ನಾಯಕರೂ ಮಾಹಿತಿ ಕಲೆ ಹಾಕುತ್ತಿದ್ದಾರೆ. ಆಗಲೇ ಸತ್ಯ ತಿಳಿದುಬರುವುದು. ನನ್ನ ವ್ಯಕ್ತಿತ್ವವೇನು? ನನ್ನ ಅಭಿವೃದ್ಧಿ ಕೆಲಸಗಳೇನು ಎಂಬುದು ಗೊತ್ತಾಗುತ್ತವೆ. ಮಾಹಿತಿ ಸಂಗ್ರಹದಿಂದ ನನಗೆ ಅನುಕೂಲ ಆಗಲಿದೆಯೇ ಹೊರತು ಕೆಟ್ಟದಾಗುವುದಿಲ್ಲ. ಹೈಕಮಾಂಡ್ ಬಗ್ಗೆ ತನಗೆ ನಂಬಿಕೆಯಿದೆ. ಕೆಲಸದ ಆಧಾರದ ಮೇಲೆ ಟಿಕೆಟ್ ಸಿಗಲಿದೆ ಎಂದು ಶೋಭಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.