ಉಡುಪಿ: ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಇಂದ್ರಾಳಿ ರೈಲ್ವೆ ಸೇತುವೆಯ ತುಕ್ಕು ಹಿಡಿದ ಕಬ್ಬಿಣದ ಕಂಬಿಗಳನ್ನು ಸ್ವಚ್ಛಗೊಳಿಸಿ ಬಣ್ಣ ಬಳಿಯುವ ಮೂಲಕ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರ ನೇತೃತ್ವದಲ್ಲಿ ವಿಶಿಷ್ಟ ರೀತಿಯಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಇಂದ್ರಾಳಿ ರೈಲ್ವೆ ಸೇತುವೆ ಬಳಿ ಇಂದು ಸ್ವಚ್ಛತಾ ಅಭಿಯಾನವನ್ನು ನಡೆಸಲಾಯಿತು. ರೈಲ್ವೆ ಸೇತುವೆ ಕಾಮಗಾರಿ ಆರಂಭಗೊಂಡು ಐದು ವರ್ಷಗಳು ಕಳೆದರೂ ಇನ್ನೂ ಪೂರ್ಣಗೊಂಡಿಲ್ಲ. ಅರ್ಧಕ್ಕೆ ನಿಂತಿರುವ ರೈಲ್ವೆ ಸೇತುವೆಯ ಕಬ್ಬಿಣದ ಕಂಬಿಗಳು ತುಕ್ಕು ಹಿಡಿದಿವೆ. ಈ ಹಿನ್ನೆಲೆಯಲ್ಲಿ ನಾಗರಿಕ ಸಮಿತಿಯ ವತಿಯಿಂದ ತುಕ್ಕು ಹಿಡಿದ ಕಬ್ಬಿಣದ ಕಂಬಿಗಳನ್ನು ಸ್ವಚ್ಛಗೊಳಿಸಿ ಬಣ್ಣ ಬಳಿಯುವ ಮೂಲಕ ಸಂಬಂಧಪಟ್ಟವರ ಗಮನ ಸೆಳೆಯಲಾಯಿತು. ಚಿಟ್ಪಾಡಿ ಪದ್ಮನಗರದ ಆನಂದ ನೇತೃತ್ವದ ತಂಡವು ಡೋಲು ಬಾರಿಸುವ ಮೂಲಕ ಸಾರ್ವಜನಿಕರನ್ನು ಎಚ್ಚರಿಸಿದರು.
ನಿತ್ಯಾನಂದ ಒಳಕಾಡು ಅವರ ನೇತೃತ್ವದಲ್ಲಿ ಮೊದಲು ಕಬ್ಬಿಣದ ಕಂಬಿಗಳನ್ನು ಸ್ವಚ್ಛಗೊಳಿಸಲಾಯಿತು. ಬಳಿಕ ಕಬ್ಬಿಣದ ಕಂಬಿಗಳಿಗೆ ಕೆಂಪು ಬಣ್ಣವನ್ನು ಬಳಿಯಲಾಯಿತು. ಸ್ವಚ್ಚತಾ ಕಾರ್ಯಕ್ರಮಕ್ಕೆ ನಾಗರಿಕ ಸಮಿತಿಯ ಸದಸ್ಯರು ಸಹಕರಿಸಿದರು.
ಬಳಿಕ ಸುದ್ದಿಗಾರರೊಂದಿಗೆ ನಾಗರಿಕ ಸಮಿತಿ ಸಂಚಾಲಕ ನಿತ್ಯಾನಂದ ಒಳಕಾಡು ಮಾತನಾಡಿ, ರೈಲ್ವೆ ಸೇತುವೆ ಕಾಮಗಾರಿ ಅರ್ಧಕ್ಕೆ ನಿಂತು ಐದು ವರ್ಷಗಳೇ ಕಳೆದಿವೆ. ಇಲ್ಲಿ ಹಾಕಿರುವ ಕಬ್ಬಿಣದ ಕಂಬಿಗಳು ತುಕ್ಕು ಹಿಡಿದು ಹಾಳಾಗುತ್ತಿವೆ. ರೈಲ್ವೆ ಸೇತುವೆ ಕಾಮಗಾರಿ ಪೂರ್ಣಗೊಳ್ಳದ ಪರಿಣಾಮ ಸಾಕಷ್ಟು ಅಪಘಾತಗಳು ನಡೆದಿವೆ. ಹಲವು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಆದರೂ ಸರಕಾರ ಮಾತ್ರ ಕಣ್ಣು ಮುಚ್ಚಿ ಕುಳಿತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರಧಾನಿ ಮೋದಿ, ನಿತಿನ್ ಗಡ್ಕರಿ, ರೈಲ್ವೆ ಸಚಿವರು ಯಾಕೆ ಉಡುಪಿಯನ್ನು ಕಡೆಗಣಿಸುತ್ತಿದ್ದೀರಿ. ಉಡುಪಿ ಜನರು ಮೂರ್ಖರೆಂದು ತಿಳಿಯಬೇಡಿ. ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಿ, ಸಮಸ್ಯೆಗೆ ಪರಿಹಾರ ಕಲ್ಪಿಸಿ. ಆ ನಿಟ್ಟಿನಲ್ಲಿ ಈ ಸ್ವಚ್ಚತಾ ಪ್ರತಿಭಟನಾ ಅಭಿಯಾನವನ್ನು ಹಮ್ಮಿಕೊಂಡು, ಸರಕಾರದ ಕಣ್ಣು ತೆರೆಸುವ ಕೆಲಸ ಮಾಡಿದ್ದೇವೆ ಎಂದರು.