Sunday, November 24, 2024

ಸಾರ್ವಜನಿಕರ ಸಂಚಾರಕ್ಕೆ ಧಕ್ಕೆಯುಂಟಾಗದಂತೆ ಪಟಾಕಿ ಮಳಿಗೆಗಳನ್ನು ತೆರೆಯಲು ಅನುಮತಿ ನೀಡಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

Must read

ಉಡುಪಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರ ಸಂಚಾರ ವ್ಯವಸ್ಥೆಗೆ ಧಕ್ಕೆಯುಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಸೂಕ್ತ ಸ್ಥಳವನ್ನು ಗುರುತಿಸಿ, ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚಿಸಿದರು.

ಮಣಿಪಾಲ ರಜತಾದ್ರಿಯ ತಮ್ಮ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಳಿಗೆಗಳನ್ನು ತೆರೆಯಲು ಅನುಮತಿ ನೀಡುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸುಡುಮದ್ದು ಮಾರಾಟ ಮಳಿಗೆಗಳನ್ನು ತೆರೆಯಲು ಅನುಮತಿ ನೀಡುವ ಮೊದಲು ನಿಯೋಜಿಸಲಾದ ಅಧಿಕಾರಿಗಳು ಮಳಿಗೆ ತೆರೆಯುವ ಪ್ರದೇಶಗಳನ್ನು ಖುದ್ದು ಪರಿಶೀಲನೆ ನಡೆಸಬೇಕು. ಅಂಗಡಿ ಮುಂಗಟ್ಟುಗಳ ಸಮೀಪದಲ್ಲಿ ಮತ್ತು ಜನನಿಬಿಡ ಪ್ರದೇಶಗಳಲ್ಲಿ ಸಂಚಾರ ವ್ಯವಸ್ಥೆಗೆ ಸಮಸ್ಯೆಯಾಗುವುದು ಕಂಡು ಬಂದಲ್ಲಿ ಪಟಾಕಿ ಮಳಿಗೆ ತೆರೆಯಲು ಅನುಮತಿ ನೀಡಬಾರದು ಎಂದರು.

ಕಾರ್ಕಳ ಹಾಗೂ ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಈ ಹಿಂದಿನಂತೆ ಸಮಿತಿಯನ್ನು ರಚಿಸಿ, ಚೀಟಿ ಎತ್ತುವ ಮೂಲಕ ಸ್ಥಳ ಹಂಚಿಕೆ ಮಾಡುವಂತೆ ತಿಳಿಸಿದ ಅವರು, ಉಡುಪಿ ನಗರಸಭಾ ವ್ಯಾಪ್ತಿಯ ಮಲ್ಪೆ, ಸಂತೆಕಟ್ಟೆ, ಬೀಡಿನಗುಡ್ಡೆ, ಎಂ.ಜಿ.ಎಂ, ಮಣಿಪಾಲ ಹಾಗೂ ಅಂಬಲಪಾಡಿ ಪ್ರದೇಶಗಳಲ್ಲಿ ಪಟಾಕಿ ಮಳಿಗೆಗಳನ್ನು ತೆರೆಯುವಲ್ಲಿ, ಸಂಚಾರ ವ್ಯವಸ್ಥೆಗೆ ತೊಂದರೆಯಾಗದಂತೆ ವಾಹನ ನಿಲುಗಡೆಗೆ ಅವಕಾಶವಿರುವ, ಜನವಸತಿ ಕಡಿಮೆ ಇರುವ ಪ್ರದೇಶದಲ್ಲಿ ನಿಯೋಜಿಸಲಾದ ಅಧಿಕಾರಿಗಳು ಸ್ಥಳ ಗುರುತಿಸಿ, ವ್ಯಾಪಾರ ನಡೆಸುವ ವ್ಯಕ್ತಿಗಳಿಗೆ ಹಂಚಿಕೆ ಮಾಡುವಂತೆ ತಿಳಿಸಿದರು.

ಪರವಾನಿಗೆ ಕೋರಿ ಅಕ್ಟೋಬರ್ 16 ರ ಒಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಸಂಬಂಧಪಟ್ಟ ಇಲಾಖೆಗಳು ವರದಿಗಳನ್ನು ಶೀಘ್ರ ಪಡೆದು ಅರ್ಜಿಗಳನ್ನು ವಿಲೇವಾರಿ ಮಾಡುವಂತೆ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಎ.ಎಸ್.ಪಿ ಸಿದ್ಧಲಿಂಗಪ್ಪ, ನಗರಸಭೆ ಪೌರಾಯುಕ್ತ ರಾಯಪ್ಪ, ತಾಲೂಕು ತಹಶೀಲ್ದಾರ್‌ಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

spot_img

More articles

LEAVE A REPLY

Please enter your comment!
Please enter your name here