Saturday, October 17, 2026

ಹೊಸ ಜಿಲ್ಲಾಸ್ಪತ್ರೆ ಕಟ್ಟಡಕ್ಕೆ ಹಳೆಯ ತುಕ್ಕು ಹಿಡಿದ ಹಾಸಿಗೆಗಳ  ಸ್ಥಳಾಂತರ; ಜನರ ಆರೋಗ್ಯದ ಜೊತೆ ರಾಜ್ಯ ಸರಕಾರದ ಚೆಲ್ಲಾಟ- ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ

Must read

ಉಡುಪಿ: ಅಗತ್ಯ ಮೂಲಸೌಕರ್ಯ, ವೈದ್ಯಕೀಯ ಉಪಕರಣಗಳು ಹಾಗೂ ವೈದ್ಯರು ಮತ್ತು ಸಿಬ್ಬಂದಿಯ ನೇಮಕಾತಿ ಇಲ್ಲದೆ ಅಜ್ಜರಕಾಡಿನ ನೂತನ ಜಿಲ್ಲಾಸ್ಪತ್ರೆ ಕಟ್ಟಡಕ್ಕೆ ತಾಲೂಕು ಆಸ್ಪತ್ರೆಯನ್ನು ಸ್ಥಳಾಂತರಿಸಲು ಸರ್ಕಾರ ಮುಂದಾಗಿರುವುದು ಜಿಲ್ಲೆಯ ಜನರ ಆರೋಗ್ಯದೊಂದಿಗೆ ಚೆಲ್ಲಾಟವಾಡಿದಂತೆ ಎಂದು ಶಾಸಕ ಯಶ್‌ಪಾಲ್ ಎ. ಸುವರ್ಣ ಆರೋಪಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 250 ಹಾಸಿಗೆಗಳ ಆರು ಮಹಡಿಗಳ ನೂತನ ಜಿಲ್ಲಾಸ್ಪತ್ರೆಯನ್ನು ಮೂಲ ವಿಸ್ತೃತ ಯೋಜನಾ ವರದಿಯ ಪ್ರಕಾರ ಸಜ್ಜುಗೊಳಿಸದೆ, ತರಾತುರಿಯಲ್ಲಿ ಸ್ಥಳಾಂತರಕ್ಕೆ ಮುಂದಾಗಿರುವುದು ಖಂಡನೀಯ ಎಂದರು.

ನೂತನ ಜಿಲ್ಲಾಸ್ಪತ್ರೆಗೆ ಅಗತ್ಯವಿರುವ ವೈದ್ಯರು, ಶುಶ್ರೂಷಕರು, ತಾಂತ್ರಿಕ ಸಿಬ್ಬಂದಿ ಸೇರಿದಂತೆ ವಿವಿಧ ಹುದ್ದೆಗಳನ್ನು ಮಂಜೂರು ಮಾಡಿಲ್ಲ. ಸ್ಕ್ಯಾನಿಂಗ್, ಎಕ್ಸ್‌ರೇ ಮತ್ತಿತರ ವೈದ್ಯಕೀಯ ಉಪಕರಣಗಳು, ಪೀಠೋಪಕರಣಗಳು, ಕಂಪ್ಯೂಟರ್‌ಗಳು ಹಾಗೂ ಪ್ರಿಂಟರ್‌ಗಳನ್ನೂ ಒದಗಿಸಿಲ್ಲ. ಆರು ಮಹಡಿಗಳ ಕಟ್ಟಡದ ನಿರ್ವಹಣೆ ಮತ್ತು ಸ್ವಚ್ಛತೆಗೆ ಅಗತ್ಯವಿರುವ ಸಿಬ್ಬಂದಿ ಹಾಗೂ ಪರಿಕರಗಳ ವ್ಯವಸ್ಥೆಯೂ ಆಗಿಲ್ಲ ಎಂದು ದೂರಿದರು.

ಹಳೆಯ ಹಾಸಿಗೆಗಳನ್ನೇ ಸ್ಥಳಾಂತರಿಸುವ ಸಿದ್ಧತೆ

ಪ್ರಸ್ತುತ ಉಡುಪಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 120 ಹಾಸಿಗೆಗಳ ತಾಲೂಕು ಆಸ್ಪತ್ರೆಯನ್ನು ಹೆಚ್ಚುವರಿ ಸೌಲಭ್ಯಗಳಿಲ್ಲದೆ ನೂತನ ಕಟ್ಟಡಕ್ಕೆ ಸ್ಥಳಾಂತರಿಸಲು ಸಿದ್ಧತೆ ನಡೆಸಲಾಗಿದೆ. ಆಸ್ಪತ್ರೆಯಲ್ಲಿರುವ ಸುಮಾರು 30 ವರ್ಷ ಹಳೆಯದಾದ, ತುಕ್ಕು ಹಿಡಿದ 120 ಹಾಸಿಗೆಗಳನ್ನೇ ಹೊಸ ಕಟ್ಟಡಕ್ಕೆ ಕೊಂಡೊಯ್ಯಲು ಮುಂದಾಗಿರುವುದು ದುರದೃಷ್ಟಕರ. ಅಗತ್ಯ ವೈದ್ಯಕೀಯ ಸೌಲಭ್ಯಗಳಿಲ್ಲದೆ ಸ್ಥಳಾಂತರಿಸಿದರೆ, ಅದು ಕೇವಲ ಕಟ್ಟಡ ಬದಲಾವಣೆಯಾಗಲಿದೆಯೇ ಹೊರತು ಜನರಿಗೆ ಜಿಲ್ಲಾಸ್ಪತ್ರೆಯ ಮಟ್ಟದ ಸೇವೆಗಳು ದೊರೆಯುವುದಿಲ್ಲ ಎಂದರು.

ಕಳೆದ ಮೂರು ವರ್ಷಗಳಿಂದ ವಿಧಾನಸಭೆ ಅಧಿವೇಶನಗಳಲ್ಲಿ ಈ ವಿಷಯವನ್ನು ಪ್ರಸ್ತಾಪಿಸುತ್ತಿದ್ದರೂ ಸರ್ಕಾರ ಅನುದಾನ ಒದಗಿಸಿಲ್ಲ. ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಾಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಹಿಂದಿನ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಹಾಲಿ ಆರೋಗ್ಯ ಸಚಿವ ಯು.ಟಿ. ಖಾದರ್ ಹಾಗೂ ಹಿಂದಿನ ಮತ್ತು ಹಾಲಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಹಲವು ಬಾರಿ ಪತ್ರ ಬರೆದು ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

ವಿಶೇಷ ಚಿಕಿತ್ಸಾ ವಿಭಾಗಗಳಿಗೂ ಮಂಜೂರಾತಿ ಇಲ್ಲ

ರಾಜ್ಯದ ಇತರ ಜಿಲ್ಲಾಸ್ಪತ್ರೆಗಳಲ್ಲಿ ಲಭ್ಯವಿರುವ ವಿವಿಧ ವಿಶೇಷ ಚಿಕಿತ್ಸಾ ವಿಭಾಗಗಳನ್ನೂ ಉಡುಪಿಯ ನೂತನ ಜಿಲ್ಲಾಸ್ಪತ್ರೆಗೆ ಮಂಜೂರು ಮಾಡಿಲ್ಲ. ಅಗತ್ಯ ಸೌಲಭ್ಯಗಳಿಲ್ಲದೆ ಆಸ್ಪತ್ರೆಯನ್ನು ಆರಂಭಿಸಿದರೆ, ದಶಕಗಳಿಂದ ಜಿಲ್ಲೆಯ ಜನರು ಹೊಂದಿರುವ ನಿರೀಕ್ಷೆಗೆ ಧಕ್ಕೆಯಾಗಲಿದೆ. ಸಮರ್ಪಕ ವೈದ್ಯಕೀಯ ವ್ಯವಸ್ಥೆಯಿಲ್ಲದೆ ಆಸ್ಪತ್ರೆಗೆ ಬರುವ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡುವುದು ವೈದ್ಯಾಧಿಕಾರಿಗಳಿಗೂ ಸವಾಲಾಗಲಿದೆ. ಇದರಿಂದ ರೋಗಿಗಳು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಯಿದೆ ಎಂದು ಹೇಳಿದರು.

ಸ್ಥಳೀಯ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಪಕ್ಷೀಯವಾಗಿ ಸ್ಥಳಾಂತರದ ನಿರ್ಧಾರ ಕೈಗೊಳ್ಳುತ್ತಿರುವುದಕ್ಕೂ ಆಕ್ಷೇಪ ವ್ಯಕ್ತಪಡಿಸಿದ ಅವರು, ಉಡುಪಿ ಜಿಲ್ಲೆ ರಚನೆಯಾಗಿ 28 ವರ್ಷಗಳಾದರೂ ಜನರ ಬಹುಕಾಲದ ಕನಸಾದ ಸುಸಜ್ಜಿತ ಜಿಲ್ಲಾಸ್ಪತ್ರೆ ಪೂರ್ಣ ಪ್ರಮಾಣದ ಸೌಲಭ್ಯಗಳೊಂದಿಗೆ ಕಾರ್ಯಾರಂಭ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ವಾರದೊಳಗೆ ಸಭೆ ನಡೆಸಲು ಆಗ್ರಹ

ಹಳೆಯ ಹಾಸಿಗೆಗಳು ಮತ್ತು ಇತರ ವಸ್ತುಗಳನ್ನು ನೂತನ ಆಸ್ಪತ್ರೆಗೆ ಸ್ಥಳಾಂತರಿಸುತ್ತಿರುವ ಕುರಿತು ಆರೋಗ್ಯ ಸಚಿವ ಯು.ಟಿ. ಖಾದರ್ ಅವರಲ್ಲಿ ಮಾಹಿತಿ ಕೇಳಿದಾಗ, ಈ ಬಗ್ಗೆ ತಮಗೆ ಮಾಹಿತಿ ಇಲ್ಲ; ಕೂಡಲೇ ಮಾಹಿತಿ ಪಡೆದು ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಸುವರ್ಣ ಹೇಳಿದರು.

ಆರೋಗ್ಯ ಸಚಿವರು ವಾರದೊಳಗೆ ಉಡುಪಿಗೆ ಭೇಟಿ ನೀಡಿ ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳನ್ನು ಒಳಗೊಂಡ ಸಭೆ ನಡೆಸಿ ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕು. ನೂತನ ಜಿಲ್ಲಾಸ್ಪತ್ರೆಗೆ ಅಗತ್ಯ ವೈದ್ಯರು, ಶುಶ್ರೂಷಕರು, ತಾಂತ್ರಿಕ ಮತ್ತು ಇತರ ಸಿಬ್ಬಂದಿಯನ್ನು ನೇಮಿಸಬೇಕು. ಅತ್ಯಾಧುನಿಕ ವೈದ್ಯಕೀಯ ಉಪಕರಣಗಳು, ಹೊಸ ಹಾಸಿಗೆಗಳು ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಿ, ರಾಜ್ಯದ ಇತರ ಜಿಲ್ಲಾಸ್ಪತ್ರೆಗಳಿಗೆ ಸಮಾನವಾಗಿ ಸಜ್ಜುಗೊಳಿಸಿದ ಬಳಿಕವೇ ಸಾರ್ವಜನಿಕರ ಸೇವೆಗೆ ಸಮರ್ಪಿಸಬೇಕು ಎಂದು ಒತ್ತಾಯಿಸಿದರು.

ಸಚಿವರು ವಾರದೊಳಗೆ ಭೇಟಿ ನೀಡಿ ಸಭೆ ನಡೆಸದಿದ್ದರೆ ಸಾರ್ವಜನಿಕರೊಂದಿಗೆ ಸೇರಿ ಅಹೋರಾತ್ರಿ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು ಹಾಗೂ ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್ ಉಪಸ್ಥಿತರಿದ್ದರು.

spot_img

More articles

LEAVE A REPLY

Please enter your comment!
Please enter your name here