Monday, November 16, 2026

ಉಡುಪಿ: ಮತಾಂತರ, ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆದರೆ ರಾಜ್ಯಾದ್ಯಂತ ಬೃಹತ್ ಜನಾಂದೋಲನ: ವಿಹಿಂಪ ಎಚ್ಚರಿಕೆ

Must read

ಉಡುಪಿ: ರಾಜ್ಯ ಸರ್ಕಾರವು ಮತಾಂತರ ನಿಷೇಧ ಕಾಯ್ದೆ ಹಾಗೂ ಗೋಹತ್ಯೆ ಪ್ರತಿಬಂಧಕ ಕಾಯ್ದೆಗಳನ್ನು ವಾಪಸು ಪಡೆಯುವ ಅಥವಾ ದುರ್ಬಲಗೊಳಿಸುವ ನಿರ್ಧಾರ ಕೈಗೊಂಡರೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ಹಾಗೂ ಜನಾಂದೋಲನ ನಡೆಸಲಾಗುವುದು ಎಂದು ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ ನೀಡಿದೆ.
ಮುಂಬರುವ ಬೆಳಗಾವಿ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣಾ ಕಾಯ್ದೆ-2022’ ಹಾಗೂ ‘ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020’ ಅನ್ನು ಯಾವುದೇ ಕಾರಣಕ್ಕೂ ಹಿಂಪಡೆಯಬಾರದು. ಈ ಕಾಯ್ದೆಗಳನ್ನು ದುರ್ಬಲಗೊಳಿಸುವ ಪ್ರಯತ್ನಕ್ಕೆ ಸರ್ಕಾರ ಮುಂದಾಗಬಾರದು ಎಂದು ವಿಹಿಂಪ ಆಗ್ರಹಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ ಉಡುಪಿ ಜಿಲ್ಲಾ ಕಾರ್ಯಾಧ್ಯಕ್ಷ ಸುನಿಲ್ ಕೆ.ಆರ್., ಈ ಎರಡು ಕಾಯ್ದೆಗಳನ್ನು ರದ್ದುಗೊಳಿಸುವಂತೆ ಕೆಲವು ಸಂಘಟನೆಗಳು ನಡೆಸುತ್ತಿರುವ ಒತ್ತಡಕ್ಕೆ ರಾಜ್ಯ ಸರ್ಕಾರ ಮಣಿಯಬಾರದು. ಡಿಸೆಂಬರ್ 2ರಿಂದ ಆರಂಭವಾಗಲಿರುವ ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಹಿಂಪಡೆಯುವ ಕುರಿತು ಕೆಪಿಸಿಸಿ ಅಧ್ಯಕ್ಷರು ನೀಡಿರುವ ಹೇಳಿಕೆ ಖಂಡನೀಯ ಎಂದರು.
ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣಾ ಕಾಯ್ದೆಯು ಯಾವುದೇ ನಿರ್ದಿಷ್ಟ ಧರ್ಮವನ್ನು ಗುರಿಯಾಗಿಸಿಕೊಂಡಿಲ್ಲ. ಬದಲಾಗಿ ಬಲವಂತ, ವಂಚನೆ, ಆಮಿಷ ಅಥವಾ ದಾರಿತಪ್ಪಿಸುವ ಮೂಲಕ ನಡೆಯುವ ಕಾನೂನುಬಾಹಿರ ಮತಾಂತರವನ್ನು ತಡೆಯುವ ಉದ್ದೇಶ ಹೊಂದಿದೆ. ಬಲವಂತದ ಮತಾಂತರ ಮೂಲಭೂತ ಹಕ್ಕಲ್ಲ ಎಂಬುದನ್ನು ಸುಪ್ರೀಂ ಕೋರ್ಟ್ ಕೂಡ ಹಿಂದಿನ ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ. ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರವೇ ಇಂತಹ ಕಾಯ್ದೆಯನ್ನು ಜಾರಿಗೆ ತಂದಿರುವಾಗ ಕರ್ನಾಟಕದಲ್ಲಿ ಅದನ್ನು ಹಿಂಪಡೆಯುವ ಪ್ರಯತ್ನ ಸರಿಯಲ್ಲ ಎಂದು ಹೇಳಿದರು.
ಗೋವು ಭಾರತೀಯ ಕೃಷಿ ಪದ್ಧತಿಯ ಬೆನ್ನೆಲುಬಾಗಿದ್ದು, ರೈತರ ಹಿತಾಸಕ್ತಿ ಮತ್ತು ಪಶುಸಂಪತ್ತಿನ ರಕ್ಷಣೆಯ ದೃಷ್ಟಿಯಿಂದ ಗೋಹತ್ಯೆ ಪ್ರತಿಬಂಧಕ ಕಾಯ್ದೆ ಅಗತ್ಯವಾಗಿದೆ. ಈ ಕಾಯ್ದೆಯಿಂದ ರಾಜ್ಯದಲ್ಲಿ ಗೋವುಗಳ ರಕ್ಷಣೆಗೆ ಸಹಕಾರಿಯಾಗಿದ್ದು, ಅಕ್ರಮ ಗೋಸಾಗಾಟ ಹಾಗೂ ಗೋವುಗಳ ಕಳ್ಳತನಕ್ಕೆ ಕಡಿವಾಣ ಬಿದ್ದಿದೆ. ರಾಜಕೀಯ ತುಷ್ಟೀಕರಣದ ಉದ್ದೇಶದಿಂದ ಕಾಯ್ದೆಯನ್ನು ದುರ್ಬಲಗೊಳಿಸುವ ಪ್ರಯತ್ನ ನಡೆದರೆ ಅದು ಅನಗತ್ಯ ಕೋಮು ಸಂಘರ್ಷಕ್ಕೆ ಕಾರಣವಾಗಬಹುದು ಎಂದು ಎಚ್ಚರಿಸಿದರು.
ಧರ್ಮದ ಆಧಾರದಲ್ಲಿ ಸೇನಾ ತರಬೇತಿಗೆ ಆಕ್ಷೇಪ:
ರಾಜ್ಯ ಸರ್ಕಾರದ ಅಲ್ಪಸಂಖ್ಯಾತರ ನಿರ್ದೇಶನಾಲಯವು 2026-27ನೇ ಸಾಲಿನಲ್ಲಿ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮಾತ್ರ 60 ದಿನಗಳ ಸೇನಾ ತರಬೇತಿ ನೀಡಲು ಟೆಂಡರ್ ಕರೆದಿರುವುದನ್ನೂ ವಿಹಿಂಪ ವಿರೋಧಿಸಿದೆ. ಸಾರ್ವಜನಿಕರ ತೆರಿಗೆ ಹಣದಲ್ಲಿ ಒಂದು ಸಮುದಾಯದ ವಿದ್ಯಾರ್ಥಿಗಳಿಗೆ ಮಾತ್ರ ತರಬೇತಿ ನೀಡುವುದು ಹಾಗೂ ಇತರ ಸಮುದಾಯಗಳ ಅರ್ಹ ಬಡ ವಿದ್ಯಾರ್ಥಿಗಳನ್ನು ಹೊರಗಿಡುವುದು ಸಂವಿಧಾನದ ಸಮಾನತೆಯ ಆಶಯಕ್ಕೆ ವಿರುದ್ಧವಾಗಿದೆ. ಈ ಟೆಂಡರ್ ಅನ್ನು ತಕ್ಷಣ ರದ್ದುಗೊಳಿಸಬೇಕು ಎಂದು ಅವರು ಒತ್ತಾಯಿಸಿದರು
ಈ ಮೂರು ವಿಚಾರಗಳ ಕುರಿತು ವಿಶ್ವ ಹಿಂದೂ ಪರಿಷತ್ ವತಿಯಿಂದ ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್‌ಗಳ ಮೂಲಕ ರಾಜ್ಯಪಾಲರು, ಮುಖ್ಯಮಂತ್ರಿ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಲಾಗುತ್ತದೆ. ಸರ್ಕಾರವು ಈ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸಲಾಗುವುದು ಎಂದು ಸುನಿಲ್ ಕೆ.ಆರ್. ಎಚ್ಚರಿಕೆ ನೀಡಿದರು.

spot_img

More articles

LEAVE A REPLY

Please enter your comment!
Please enter your name here