Monday, November 23, 2026

ಗ್ರಾಮೀಣ ಭಾಗದ ಜನರಿಗೆ ಉಚಿತ ನೇತ್ರ ತಪಾಸಣೆ ಅತ್ಯಂತ ಉಪಯುಕ್ತ: ಶಾಸಕ ಕಿರಣ್ ಕುಮಾರ್ ಕೊಡ್ಗಿ

Must read

ಉಡುಪಿ: ಗ್ರಾಮೀಣ ಭಾಗದ ಜನರಲ್ಲಿ ಕಣ್ಣಿನ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಜತೆಗೆ, ಆರಂಭಿಕ ಹಂತದಲ್ಲೇ ಕಣ್ಣಿನ ಸಮಸ್ಯೆಗಳನ್ನು ಪತ್ತೆಹಚ್ಚಲು ಉಚಿತ ನೇತ್ರ ತಪಾಸಣಾ ಶಿಬಿರಗಳು ಸಹಕಾರಿಯಾಗಿವೆ ಎಂದು ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಹೇಳಿದರು.
ವಕ್ವಾಡಿ ಫ್ರೆಂಡ್ಸ್ ವಕ್ವಾಡಿ ನೇತೃತ್ವದಲ್ಲಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ಒನ್ ಸೈಟ್ ಎಸ್ಸಿಲಾರ್ ಲಕ್ಸೂಟಿಕಾ ಫೌಂಡೇಶನ್ ಬೆಂಗಳೂರು, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಕೊರ್ಗಿ ಇವರ ಸಂಯುಕ್ತ ಆಶ್ರಯದಲ್ಲಿ ಭಾನುವಾರ ವಕ್ವಾಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ‘ಆರೋಗ್ಯ ಸ್ಪಂದನ 2026’ ಉಚಿತ ನೇತ್ರ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಸಮಯಕ್ಕೆ ಸರಿಯಾಗಿ ಕಣ್ಣಿನ ತಪಾಸಣೆ ಮಾಡಿಸಿಕೊಳ್ಳುವುದರಿಂದ ಅನೇಕ ಸಮಸ್ಯೆಗಳನ್ನು ಆರಂಭದಲ್ಲೇ ಗುರುತಿಸಿ ಸೂಕ್ತ ಚಿಕಿತ್ಸೆ ಪಡೆಯಲು ಸಾಧ್ಯವಾಗುತ್ತದೆ. ಇಂತಹ ಸಾಮಾಜಿಕ ಸೇವಾ ಕಾರ್ಯಕ್ರಮಗಳು ಗ್ರಾಮೀಣ ಜನರಿಗೆ ವರದಾನವಾಗಿದ್ದು, ಶಿಬಿರ ಆಯೋಜಿಸಿದ ವಕ್ವಾಡಿ ಫ್ರೆಂಡ್ಸ್ ಸಂಸ್ಥೆ ಹಾಗೂ ಸಹಕರಿಸಿದ ಎಲ್ಲ ಸಂಸ್ಥೆಗಳ ಕಾರ್ಯ ಶ್ಲಾಘನೀಯ ಎಂದರು.
ಸಂಸ್ಥೆಯ ಪ್ರಮುಖರಾದ ಕೀರ್ತಿ ಶೆಟ್ಟಿ ವಕ್ವಾಡಿ ಪ್ರಾಸ್ತಾವಿಕವಾಗಿ ಮಾತನಾಡಿ, ಗ್ರಾಮದ ಪ್ರತಿಯೊಬ್ಬರಿಗೂ ಉಚಿತವಾಗಿ ಗುಣಮಟ್ಟದ ನೇತ್ರ ಸೇವೆ ಒದಗಿಸುವ ಉದ್ದೇಶದಿಂದ ಶಿಬಿರ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಕೃಷ್ಣ ಶೆಟ್ಟಿಗಾರ್ ವಹಿಸಿದ್ದರು.
ವೇದಿಕೆಯಲ್ಲಿ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿ ವಕ್ವಾಡಿ, ನಾಡೋಜ ಡಾ. ಕೃಷ್ಣಪ್ರಸಾದ್ ಕೂಡ್ಲು, ಧರ್ಮಪ್ರಸಾದ್ ರೈ ಎ., ಕ್ಯಾನ್ಸರ್ ತಜ್ಞ ಡಾ. ಸಂತೋಷ್ ಕುಲಾಲ್, ಶಾಲೆಯ ಮುಖ್ಯೋಪಾಧ್ಯಾಯಿನಿ ಭಾರತಿ ಎನ್., ವಕ್ವಾಡಿ ಫ್ರೆಂಡ್ಸ್ ಮಹಿಳಾ ಮಂಡಳಿಯ ಅಧ್ಯಕ್ಷೆ ನಾಗರತ್ನ ಹಾಗೂ ಕೊರ್ಗಿ ಆರೋಗ್ಯ ಕೇಂದ್ರದ ಸಿಎಚ್‌ಒ ಮೇದನಿ ಉಪಸ್ಥಿತರಿದ್ದರು.
ಶಿಬಿರದಲ್ಲಿ ನುರಿತ ತಜ್ಞ ವೈದ್ಯರಿಂದ ನೇತ್ರ ತಪಾಸಣೆ ನಡೆಯಿತು. ಗ್ರಾಮದ ಹಲವು ನಾಗರಿಕರು ಶಿಬಿರದ ಪ್ರಯೋಜನ ಪಡೆದುಕೊಂಡರು.
ಸತೀಶ್ ಪೂಜಾರಿ ವಕ್ವಾಡಿ ಕಾರ್ಯಕ್ರಮ ನಿರೂಪಿಸಿದರು. ದೇವಿಪ್ರಸಾದ್ ಶೆಟ್ಟಿ ವಂದಿಸಿದರು.

spot_img

More articles

LEAVE A REPLY

Please enter your comment!
Please enter your name here