ಬೆಂಗಳೂರು: ಕೇರಳದಲ್ಲಿ ಕೋವಿಡ್ 19 ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೋವಿಡ್ ಮಾರ್ಗಸೂಚಿಯನ್ನು ಪ್ರಕಟಿಸಿದೆ.
ಸರಕಾರ ಹೊರಡಿಸಿರುವ ಹೊಸ ಮಾರ್ಗಸೂಚಿ:
- ಎಲ್ಲಾ ಹಿರಿಯ ನಾಗರೀಕರು (60 ವರ್ಷ ಹಾಗೂ ಮೇಲ್ಪಟ್ಟವರು), ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ( ವಿಶೇಷವಾಗಿ ಕಿಡ್ನಿ, ಹೃದಯ, ಲಿವರ್ ಸಮಸ್ಯೆಗಳು), ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು, ಹೊರಾಂಗಣ ಪ್ರದೇಶಗಳಿಗೆ ತೆರಳುವಾಗ ಮಾಸ್ಕ್ ಧರಿಸಬೇಕು. ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ತೆರಳದೇ ಇರುವುದು ಸೂಕ್ತವಾಗಿದೆ.
- ಜ್ವರ, ಕೆಮ್ಮು, ನೆಗಡಿ, ಇತ್ಯಾದಿ ಉಸಿರಾಟದ ಸೋಂಕಿನ ಲಕ್ಷಣಗಳನ್ನು ಹೊಂದಿದವರು ತಕ್ಷಣವೇ ಅಗತ್ಯ ವೈದ್ಯಕೀಯ ಸಲಹೆಯನ್ನು ಪಡೆಯಬೇಕು. ಮೂಗು ಹಾಗೂ ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸುವುದು, ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ಭೇಟಿ ನೀಡದಿರುವುದು ಸೂಕ್ತವಾಗಿದೆ.
- ಉತ್ತಮ ವೈಯಕ್ತಿಕ ಸ್ವಚ್ಛತೆ, ಆಗಾಗ್ಗೆ ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳೆದುಕೊಳ್ಳುವುದು, ಇತ್ಯಾದಿಗಳ ಪಾಲನೆಯು ಅಗತ್ಯವಾಗಿದೆ.
- ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ, ಮನೆಯಲ್ಲಿರುವುದು ಸೂಕ್ತ. ಇತರ ವ್ಯಕ್ತಿಗಳೊಂದಿಗೆ, ವಿಶೇಷವಾಗಿ ಹಿರಿಯ ನಾಗರೀಕರು / ದುರ್ಬಲರನ್ನು ಅವಶ್ಯವಿದ್ದಲ್ಲಿ, ಮಾತ್ರವೇ ಭೇಟಿ ಮಾಡುವುದು. ಆರೋಗ್ಯ ಸಮಸ್ಯೆಗಳನ್ನು ಹೊಂದಿದವರು, ಜನಸಂದಣಿಯ ಪ್ರದೇಶಗಳಿಗೆ ಭೇಟಿ ನೀಡಬೇಕಾದ ಸಂದರ್ಭದಲ್ಲಿ ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗಿದೆ
- ಅಂತರ ರಾಷ್ಟ್ರೀಯ ಪ್ರಯಾಣದ ಸಂದರ್ಭದಲ್ಲಿ ಎಚ್ಚರಿಕೆಯಿಂದಿದ್ದು ವಿಮಾನ ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗೆ ಮಾಸ್ ಧರಿಸುವುದು, ಹೆಚ್ಚಿನ ಗಾಳಿ-ಬೆಳಕು ಇಲ್ಲದ ಮತ್ತು ಜನದಟ್ಟಣೆ ಇರುವ ಸ್ಥಳಗಳಿಗೆ ತೆರಳದಿರುವುದೂ ಸೇರಿದಂತೆ, ಇತರ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವುದು ಸೂಕ್ತವಾಗಿದೆ.