Sunday, November 24, 2024

ಪ್ರಧಾನಿ ಮೋದಿಯವರೇ ಐದೂ ಗ್ಯಾರಂಟಿ ಜಾರಿ ಆಗಿದೆ: ನಿಮ್ಮ ಮಾತು ಸುಳ್ಳಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯ

Must read

ಬೆಂಗಳೂರು: ಪ್ರಧಾನಿ ಮೋದಿಯವರೇ ಕರ್ನಾಟಕ ರಾಜ್ಯದಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ನಿಮ್ಮ ಮಾತು ಸುಳ್ಳಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು.


ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ರಾಜ್ಯ ಸರ್ಕಾರದ ಐತಿಹಾಸಿಕ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಯ ಚಾಲನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ಯುವನಿಧಿ ಜತೆಗೆ ಉಚಿತ ತರಬೇತಿ, ಅರ್ಜಿ ಶುಲ್ಕವೂ ಉಚಿತ. ರಾಜ್ಯದ ಜನರಿಗೆ ಇದು ಮುಟ್ಟಿದೆ. ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀನಿ ಅಂದ ಮೋದಿಯವರೇ ನೀವು ಉದ್ಯೋಗ ಸೃಷ್ಟಿಸಿದ್ರಾ ? ವರ್ಷಕ್ಕೆ ಎರಡು ಕೋಟಿ ಉದ್ಯೋಗ ಅಂದ್ರೆ ಇಷ್ಟೊತ್ತಿಗೆ 20 ಕೋಟಿ ಉದ್ಯೋಗ ಸೃಷ್ಟಿಯಾಗಬೇಕಿತ್ತು. ಎಲ್ಲಿ ಸೃಷ್ಟಿಯಾಯ್ತು ಮೋದಿಯವರೇ ? ನೀವು ಮಾತಿಗೆ ತಪ್ಪಿದ ಮೋದಿ ಎಂದು ಸಿಎಂ ವ್ಯಾಪಕ ಟೀಕಿಸಿದರು.


ಭಾರತದ ಇತಿಹಾಸದಲ್ಲಿ ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿ ಇವತ್ತಿನವರೆಗೂ ಬಂದಿಲ್ಲ ಎಂದು ಟೀಕಿಸಿದರು.
ಮೋದಿಯವರೇನು ಆರ್ಥಿಕ ತಜ್ಞರಾ ? ರಾಜ್ಯದ ಜನರಿಗೆ ಗ್ಯಾರಂಟಿ ಯೋಜನೆಗಳನ್ನು ಕೊಟ್ಟರೆ ರಾಜ್ಯ ದಿವಾಳಿ ಆಗ್ತದೆ ಎಂದು ಭಾಷಣ ಮಾಡಿದ್ರು. ಈಗ ಐದೂ ಯೋಜನೆ ಜಾರಿಯಾಗಿ ರಾಜ್ಯ ಆರ್ಥಿಕವಾಗಿ ಸದೃಡವಾಗಿದೆ ಎಂದು ವಿವರಿಸಿದರು.


ವಿವೇಕಾನಂದ ಜಯಂತಿಯಂದು ಲಕ್ಷಾಂತರ ಯುವಕ ಯುವತಿಯರ ಸಮ್ಮುಖದಲ್ಲಿ ಯುವನಿಧಿಯನ್ನು ನೇರವಾಗಿ ಅರ್ಹರ ಖಾತೆಗೆ ಜಮೆ ಮಾಡುವ ಕಾರ್ಯಕ್ರಮ ನಡೆಸ್ತೀವಿ. ಮಾತು ತಪ್ಪಿದ ಮೋದಿಯವರೇ ನಿಮ್ಮ ಮಾತು ಏನಾಯ್ತು? ರಾಜ್ಯದ ಯುವ ಸಮೂಹ ನಿಮ್ಮನ್ನು ಪ್ರಶ್ನಿಸುತ್ತಿದೆ ಎಂದರು.


ರಾಜ್ಯದಲ್ಲಿ ಖಾಲಿ ಇರುವ ಉದ್ಯೋಗಗಳನ್ನೂ ಭರ್ತಿ ಮಾಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಸಿಎಂ ನುಡಿದರು.
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಘೋಷ ವಾಕ್ಯದಲ್ಲಿ ಕಾರ್ಯಕ್ರಮ ಆಯೋಜಿಸಿದೆ.


ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಶರಣಪ್ರಕಾಶ್ ಪಾಟೀಲ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾಗೇಂದ್ರ, ವಿಧಾನ‌ ಪರಿಷತ್ ಸದಸ್ಯ ಯು.ಬಿ.ವೆಂಕಟೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹ್ಮದ್ ಘನ ಉಪಸ್ಥಿತರಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ವಹಿಸಿದ್ದರು.
ಕಾರ್ಯಕ್ರಮದ ಉದ್ಘಾಟನೆ ವೇಳೆ ಮುಖ್ಯಮಂತ್ರಿಗಳಿಗೆ ಸಾಂಕೇತಿಕವಾಗಿ ಒಬ್ಬ ಯುವಕ ಮತ್ತು ಓರ್ವ ಯುವತಿ ಜತೆಯಾದರು.

spot_img

More articles

LEAVE A REPLY

Please enter your comment!
Please enter your name here