ಉಡುಪಿ: ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪತ್ರಿಷ್ಠೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ದೇವಸ್ಥಾನಗಳು ಮತ್ತು ಭಜನ ಮಂದಿರಗಳಲ್ಲಿ ವಿಶೇಷ ಪೂಜೆಗಳು, ಭಜನೆ ಹಾಗೂ ವಿವಿಧ ಸೇವಾ ಕಾರ್ಯಕ್ರಮಗಳು ನಡೆದವು.
ಉಡುಪಿಯ ಶ್ರೀಕೃಷ್ಣಮಠದ ಮಧ್ವಮಂಟಪದಲ್ಲಿ ಹಮ್ಮಿಕೊಳ್ಳಲಾದ ವಿವಿಧ ಭಜನಾ ತಂಡ ಗಳಿಂದ ವಿಶೇಷ ಉದಯಾಸ್ತಮಾನ ಅಖಂಡ ಭಜನಾ ಕಾರ್ಯಕ್ರಮಕ್ಕೆ ಪರ್ಯಾಯ ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪುತ್ತಿಗೆ ಕಿರಿಯ ಯತಿ ಶ್ರೀಸುಶ್ರೀಂದ್ರ ತೀರ್ಥ ಸ್ವಾಮೀಜಿ, ಶಾಸಕ ಯಶಪಾಲ್ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.
ಅದೇ ರೀತಿ ಕೊಡವೂರು ಶ್ರೀ ಶಂಕರನಾರಾಯಣ ದೇವಳ, ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನ ಸೇರಿದಂತೆ ಜಿಲ್ಲೆಯ ವಿವಿಧ ದೇವಳಗಳಲ್ಲಿ ಬೆಳಗ್ಗೆ ವಿಶೇಷ ಪೂಜೆ ಮತ್ತು ಸಂಜೆ ರಾಮ ದೀಪೋತ್ಸವ ನಡೆಯಿತು. ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲೂ ಸಂಭ್ರಮಾಚರಣೆ ಮಾಡಲಾಯಿತು. ಉಡುಪಿ ನಗರ, ಪರ್ಕಳ ಸೇರಿದಂತೆ ವಿವಿಧ ಕಡೆಗಳಲ್ಲಿ ಸಂಭ್ರಮಾಚರಣೆ ಕಾರ್ಯಕಮ ವನ್ನು ಹಮ್ಮಿಕೊಳ್ಳಲಾಗಿತ್ತು. ಕೆಲವು ಅಂಗಡಿಗಳಲ್ಲಿ ಗ್ರಾಹಕರಿಗೆ ಸಿಹಿ ತಿಂಡಿ ವಿತರಿಸಲಾಯಿತು.
40 ಅಡಿ ಅಗಲದ ಬಹೃತ್ ಶ್ರೀರಾಮನ ಫ್ಲೆಕ್ಸ್:
ಭವ್ಯ ರಾಮಮಂದಿರ ಲೋಕಾರ್ಪಣೆ ಹಾಗೂ ರಾಮಚಂದ್ರ ದೇವರ ಪ್ರಾಣಪ್ರತಿಷ್ಠಾ ಮಹೋತ್ಸವ ಪ್ರಯುಕ್ತ ಫ್ರೆಂಡ್ಸ್ ಇಲೆವೆನ್ ಮೂಡುಬೆಟ್ಟು ಇದರ ವತಿಯಿಂದ 40 ಅಡಿ ಅಗಲದ ಬಹೃತ್ ಫ್ಲೆಕ್ಸ್ ಹಾಕಲಾಗಿತ್ತು.
ಯಶೋಧ ಆಟೋ ಚಾಲಕರ ಮತ್ತು ಮಾಲಕರ ಸಂಘ ಮತ್ತು ಕೃಷ್ಣಮೂರ್ತಿ ಆಚಾರ್ಯ ಅಭಿಮಾನಿ ಬಳಗದ ವತಿಯಿಂದ ಉಡುಪಿ ಜಿಲ್ಲಾ ಆಸ್ಪತ್ರೆ ಮತ್ತು ಡಾ.ಟಿ.ಎಂ.ಎ.ಪೈ ಆಸ್ಪತ್ರೆಯ ಒಳರೋಗಿಗಳಿಗೆ ಫಲ ವಸ್ತು ವಿತರಿಸಲಾಯಿತು.