ಉಡುಪಿ: ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ಕಳಪೆ ಕಾಮಗಾರಿ ವಿಚಾರದಲ್ಲಿ ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ಯಾರಿಗೂ ಅನುಮಾನ ಬೇಡ. ಈ ವಿಷಯದಲ್ಲಿ ಮುಖ್ಯಮಂತ್ರಿಗಳು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದರು.
ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ನಾನೆಂದೂ ಕಾರ್ಯಕರ್ತರ ಪರ, ಅಧಿಕಾರ ಬರುತ್ತೆ, ಹೋಗುತ್ತೆ. ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರೆ ಜೀವಾಳ. ಕಾರ್ಯಕರ್ತರನ್ನು ಕಡೆಗಣಿಸುವ ಮಾತೇ ಇಲ್ಲ. ಕಾಂಗ್ರೆಸ್ ಒಂದು ಕುಟುಂಬ, ಒಂದು ಪರಿವಾರ ಇದ್ದಂತೆ ಎಂದರು.
ನಾನು ಕೂಡ ತಳಮಟ್ಟದಿಂದ ಬೆಳೆದು ಇಂದು ರಾಜ್ಯದಲ್ಲಿ ಮಂತ್ರಿಯಾಗಿದ್ದೇನೆ. 2013ರ ವಿಧಾನಸಭೆ, 2014ರ ಲೋಕಸಭಾ ಚುನಾವಣೆಯಲ್ಲಿ ಸೋತರೂ ಎದೆಗುಂದದೆ 2018ರ ವಿಧಾನಸಭಾ ಚುನಾವಣೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಜನ ನನ್ನನ್ನು 52 ಸಾವಿರ ಮತಗಳಿಂದ ಗೆಲ್ಲಿಸಿದ್ರು. 2023ರಲ್ಲಿ 56 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿದ್ರು. ಉಡುಪಿ ಜಿಲ್ಲೆಯ ಐದು ಕ್ಷೇತ್ರಗಳಲ್ಲೂ ನಾವು ಸೋತಿರಬಹುದು. ಎದೆಗುಂದದೆ ಎಲ್ಲರೂ ಒಗ್ಗೂಡಿ ಪಕ್ಷ ಕಟ್ಟೋಣ ಎಂದು ಸಚಿವರು ಕಾರ್ಯಕರ್ತರಿಗೆ ಕರೆ ನೀಡಿದರು.
ಕಾರ್ಯಕರ್ತರ ನೇರ ಭೇಟಿ:
ನಾನು ಉಡುಪಿ ಜಿಲ್ಲೆಗೆ ಇದುವರೆಗೂ 19 ಬಾರಿ ಭೇಟಿ ನೀಡಿರುವೆ. ಮುಂದಿನ ಭೇಟಿ ವೇಳೆ ಒಂದು ಗಂಟೆ ಕಾರ್ಯಕರ್ತರ ಭೇಟಿಗೆ ಮೀಸಲಿಡುವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಮುಖಂಡರಾದ ಪ್ರಸಾದ್ ಕಾಂಚನ್, ರಮೇಶ್ ಕಾಂಚನ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.