ಹೊಸದಿಲ್ಲಿ: ಕೇಂದ್ರ ಸರ್ಕಾರದ ಚುನಾವಣಾ ಬಾಂಡ್ ಯೋಜನೆಯನ್ನು ಸುಪ್ರೀಂ ಕೋರ್ಟ್ ಇಂದು ರದ್ದುಗೊಳಿಸಿ ಮಹತ್ವದ ತೀರ್ಪು ಪ್ರಕಟಿಸಿದೆ.
ಈ ಬಾಂಡ್ ಯೋಜನೆಯು ಅಸಂವಿಧಾನಿಕ ಎಂದು ಹೇಳಿ ಅದನ್ನು ರದ್ದುಗೊಳಿಸಬೇಕಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಹಾಗೂ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿ ಆರ್ ಗವಾಯಿ, ಜೆ ಬಿ ಪರ್ದಿವಾಲ ಮತ್ತು ಮನೋಜ್ ಮಿಶ್ರಾ ಅವರ ಪೀಠ ತೀರ್ಪು ನೀಡಿದೆ.
ಅಜ್ಞಾತ ಚುನಾವಣಾ ಬಾಂಡ್‌ಗಳು ಮಾಹಿತಿ ಹಕ್ಕು ಕಾಯಿದೆಯ ಹಾಗೂ ವಿಧಿ 19(1)(ಎ) ಇದರ ಉಲ್ಲಂಘನೆಯಾಗಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ.
ರಾಜಕೀಯ ಪಕ್ಷಗಳಿಗೆ ಆರ್ಥಿಕ ಬೆಂಬಲ ನೀಡುವುದು ಖ್ವಿಡ್ ಪ್ರೊ ಪ್ರೊ ಗೆ (ಅಂದರೆ ಒಂದು ಸಹಾಯ ಮಾಡಿದ್ದಕ್ಕಾಗಿ ಇನ್ನೊಂದು ಪ್ರಯೋಜನ ಪಡೆಯುವುದು) ಕಾರಣವಾಗಬಹುದೆಂದೂ ಸುಪ್ರೀಂ ಕೋರ್ಟ್ ಹೇಳಿದೆ.
ಕಾಳಧನ ನಿಯಂತ್ರಣಕ್ಕೆ ಎಲೆಕ್ಟೋರಲ್ ಬಾಂಡ್ ಯೋಜನೆ ಒಂದೇ ಆಯ್ಕೆಯಲ್ಲ ಎಂದೂ ಸುಪ್ರೀಂ ಕೋರ್ಟ್ ಹೇಳಿದೆ. ಕಾಳಧನ ನಿಯಂತ್ರಣವೆಂದು ಹೇಳಿಕೊಂಡು ಆರ್‌ಟಿಐ ಉಲ್ಲಂಘನೆಯಾಗಕೂಡದು, ಕಾಳಧನ ನಿಯಂತ್ರಣಕ್ಕೆ ಇತರ ಪರ್ಯಾಯಗಳಿವೆ ಎಂದೂ ಸುಪ್ರೀಂ ಕೋರ್ಟ್ ಹೇಳಿದೆ.
ಚುನಾವಣಾ ಬಾಂಡ್‌ಗಳನ್ನು ಮಾರಾಟ ಮಾಡುವುದನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತಕ್ಷಣ ನಿಲ್ಲಿಸಬೇಕು ಮತ್ತು ಎಲೆಕ್ಟೋರಲ್ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ಮಾಡಿರುವ ದೇಣಿಗೆಗಳ ಎಲ್ಲಾ ಮಾಹಿತಿಯನ್ನು ಒದಗಿಸಬೇಕೆಂದು ನ್ಯಾಯಾಲಯ ಹೇಳಿದೆ.