ಕಡಬ: ಕಾಲೇಜು ಆವರಣದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಯುವಕನೋರ್ವ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಆರೋಪಿಯನ್ನು ಕೇರಳದ ಮಲಪ್ಪುರಂ ಜಿಲ್ಲೆಯ ನಿಲಂಬೂರ್ ನಿವಾಸಿ ಎಂಬಿಎ ವಿದ್ಯಾರ್ಥಿ ಅಬೀನ್ (23) ಎಂದು ಗುರುತಿಸಲಾಗಿದೆ. ಆರೋಪಿ ಕಾಲೇಜಿನ ಸಮವಸ್ತ್ರವನ್ನು ಹೋಲುವ ಬಿಳಿ ಅಂಗಿ ಮತ್ತು ನೀಲಿ ಪ್ಯಾಂಟ್ ಧರಿಸಿ ಬಂದಿದ್ದು, ಪರೀಕ್ಷೆಗೆ ಸಿದ್ಧರಾಗುತ್ತಿದ್ದ ಇತರ ವಿದ್ಯಾರ್ಥಿಗಳೊಂದಿಗೆ ಜಗಲಿಯಲ್ಲಿ ಕುಳಿತಿದ್ದ ಎನ್ನಲಾಗಿದೆ. ಈ ಪರೀಕ್ಷಾ ಕೇಂದ್ರಕ್ಕೆ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಬಂದಿದ್ದರಿಂದ ಈತನ ಬಗ್ಗೆ ಯಾರಿಗೂ ಅನುಮಾನ ಬಂದಿರಲಿಲ್ಲ.
ಘಟನೆಯಲ್ಲಿ ಸಂತ್ರಸ್ತ ವಿದ್ಯಾರ್ಥಿನಿಯ ಜೊತೆಗಿದ್ದ ಇತರ ಇಬ್ಬರು ವಿದ್ಯಾರ್ಥಿನಿಯರಿಗೂ ಆ್ಯಸಿಡ್ ತಗಲಿ ಸುಟ್ಟ ಗಾಯಗಳಾಗಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಪ್ರಶ್ನೆ ಪತ್ರಿಕೆಗಳ ಬಂಡಲನ್ನು ಕಛೇರಿಯಲ್ಲಿ ಬಿಚ್ಚುತ್ತಿದ್ದ ವೇಳೆ ವಿದ್ಯಾರ್ಥಿಗಳ ಚೀರಾಟ ಕೇಳಿ ಹೊರ ಬಂದಿದ್ದಾರೆ. ಅದಾಗಲೇ ಆರೋಪಿಯು ಆ್ಯಸಿಡ್ ಎರಚಿ ಪರಾರಿಯಾಗುತ್ತಿದ್ದ. ಈ ವೇಳೆ ವಿದ್ಯಾರ್ಥಿಗಳು ಆತನನ್ನು ಬೆನ್ನಟ್ಟಿ ಹಿಡಿದು ಕಡಬ ಪೊಲೀಸರಿಗೆ ಒಪ್ಪಿಸಿದ್ದಾರೆ.
ಆರೋಪಿಯು ಸಂತ್ರಸ್ತ ವಿದ್ಯಾರ್ಥಿನಿಯ ತಾಯಿಯ ಊರಾದ ಮಲಪ್ಪುರಂ ನಿವಾಸಿಯಾಗಿದ್ದು, ದೂರದ ಸಂಬಂಧಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಸಂತ್ರಸ್ತ ಯುವತಿಯನ್ನು ಎರಡು ವರ್ಷದಿಂದ ಪ್ರೀತಿಸುತ್ತಿದ್ದ ಎನ್ನಲಾಗಿದ್ದು, ಪ್ರೀತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಈ ಆ್ಯಸಿಡ್ ದಾಳಿ ಮಾಡಿದ್ದಾನೆ ಎಂದು ತಿಳಿದುಬಂದಿದೆ.