Tuesday, October 8, 2024

ಕೈ ತಪ್ಪಿದ ವಿಧಾನಪರಿಷತ್ ಟಿಕೆಟ್: ಮಾಜಿ ಶಾಸಕ ರಘುಪತಿ ಭಟ್ ಅಸಮಾಧಾ‌ನ

Must read

ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಉಡುಪಿ ಮಾಜಿ‌ ಶಾಸಕ ಅಸಮಾಧಾನ ಹೊರಹಾಕಿದ್ದಾರೆ.

ರಘುಪತಿ ಭಟ್ ಅವರು ನೈರುತ್ಯ ಪದವೀಧರ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ, ಬಿಜೆಪಿ ಈ‌ ಕ್ಷೇತ್ರದಿಂದ ಶಿವಮೊಗ್ಗದ ಡಾ.ಧನಂಜಯ ಸರ್ಜಿ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಅಲ್ಲದೆ, ಶಿಕ್ಷಕರ ಕ್ಷೇತ್ರದ ಟಿಕೆಟ್ ಅನ್ನು ಜೆಡಿಎಸ್ ಪಕ್ಷದ ಚಿಕ್ಕಮಗಳೂರು ಅಭ್ಯರ್ಥಿಗೆ ನೀಡಿದೆ. ಇದು ರಘುಪತಿ ಭಟ್ ಅವರ ಅಸಮಾಧಾನಕ್ಕೆ ಕಾರಣವಾಗಿದೆ.

ಈ ಕುರಿತು ಫೇಸ್‌ ಬುಕ್‌ ನಲ್ಲಿ ಬರೆದುಕೊಂಡಿರುವ ಅವರು, ಶಿಕ್ಷಕರ ಕ್ಷೇತ್ರದ ಟಿಕೆಟ್ ಜೆಡಿಎಸ್ ಪಕ್ಷದ ಚಿಕ್ಕಮಗಳೂರು ಅಭ್ಯರ್ಥಿಗೆ ನೀಡಿ ಪದವೀಧರ ಕ್ಷೇತ್ರದ ಟಿಕೆಟ್ ಶಿವಮೊಗ್ಗದ ಬಿಜೆಪಿ ಅಭ್ಯರ್ಥಿಗೆ ನೀಡಲಾಗಿದೆ. ಇದು ನಾಲ್ಕು ದಶಕಗಳಿಂದ ಬಿಜೆಪಿ ಸಂಪ್ರದಾಯ ಮುರಿದು ಕರಾವಳಿ ಭಾಗಕ್ಕೆ ನೀಡುತ್ತಿದ್ದ ಶಿಕ್ಷಕರ ಕ್ಷೇತ್ರದ ಟಿಕೆಟ್ ನೀಡದೆ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಭಾಗದ ವಿದ್ಯಾವಂತ, ಪ್ರಜ್ಞಾವಂತ ಮತದಾರರಿಗೆ ಅನ್ಯಾಯ ಮಾಡಿದ ಹಾಗಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

1994 ರಿಂದಲೂ ಭಾರತೀಯ ಜನತಾ ಪಾರ್ಟಿಯ ಸಕ್ರಿಯ ಕಾರ್ಯಕರ್ತನಾಗಿ, ಪದಾಧಿಕಾರಿಯಾಗಿ ವಿವಿಧ ಸ್ಥರಗಳಲ್ಲಿ ಕೆಲಸ ಮಾಡಿದ್ದೇನೆ. ವಿಧಾನ ಸಭೆಗೆ ಸ್ಪರ್ಧಿಸಿದ 3 ಬಾರಿಯೂ ಗೆದ್ದಿರುತ್ತೇನೆ. ಆದರೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ನನಗೆ ಯಾವುದೇ ಮಾಹಿತಿ ನೀಡದೆ ನನ್ನನ್ನು ಬದಲಾಯಿಸಲಾಯಿತು ಎಂದು ಕಳೆದ ವಿಧಾನಸಭಾ ಚುನಾವಣೆ ವೇಳೆ ಟಿಕೆಟ್‌ ಕೈತಪ್ಪಿದನ್ನು ನೆನಪಿಸಿಕೊಂಡಿದ್ದಾರೆ.

ನನ್ನ ಹೆಸರಿನ ಬದಲು ಬೇರೆ ಹೆಸರು ಘೋಷಣೆಯಾಗಿದ್ದು, ಟಿವಿ ಮೂಲಕ ತಿಳಿಯಿತು. ಆದರೆ ನಾನು ವಿಚಲಿತನಾಗದೆ ಪಕ್ಷದ ಪರವಾಗಿ ಕೆಲಸ ಮಾಡಿದ್ದೇನೆ. ಆ ಸಂದರ್ಭ ನನಗೆ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದಾಗಿ ಪಕ್ಷದ ಹಿರಿಯರು ಭರವಸೆ ನೀಡಿದ್ದರು. ಆ ಪ್ರಕಾರ ಪದವೀಧರರ ಸದಸ್ಯತ್ವ ಅಭಿಯಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಅತಿ ಹೆಚ್ಚು ಸದಸ್ಯರನ್ನು ನೋಂದಾಯಿಸಿದ್ದೇನೆ. ಅಲ್ಲದೆ ಪಕ್ಷ ನೀಡಿದ ಶಿವಮೊಗ್ಗ ಲೋಕಸಭಾ ಚುನಾವಣಾ ಪ್ರಭಾರಿ ಜವಾಬ್ದಾರಿಯನ್ನು 40 ದಿನಗಳ ಕಾಲ ಶಿವಮೊಗ್ಗದಲ್ಲಿ ಉಳಿದು ಪಕ್ಷದ ಪರವಾಗಿ ಕೆಲಸ ಮಾಡಿದ್ದೇನೆ ಎಂದು ಹೇಳಿದರು.

ಪಕ್ಷದಲ್ಲಿ ನಿಷ್ಠಾವಂತರಾಗಿ ಕೆಲಸ ಮಾಡುವವರನ್ನು ಕಡೆಗಣಿಸಿ ಇತ್ತೀಚೆಗೆ ಪಕ್ಷಕ್ಕೆ ಬಂದವರಿಗೆ ಮಣೆ ಹಾಕಿದರೆ ನಮ್ಮಂತ ನಿಷ್ಠಾವಂತರ ಗತಿಯೇನು? ಪಕ್ಷದ ನಿರ್ಧಾರಿಂದ ನಾನು ನಿಜಕ್ಕೂ ಬೇಸರಗೊಂಡಿದ್ದೇನೆ. ಮುಂದೆ ನಾಯಕರು ಯಾವ ರೀತಿಯಲ್ಲಿ ಇದನ್ನು ಬಗೆಹರಿಸುತ್ತಾರೆ ಎನ್ನುವುದನ್ನು ಕಾದು ನೋಡುತ್ತೇನೆ ಎಂದರು.

spot_img

More articles

LEAVE A REPLY

Please enter your comment!
Please enter your name here