ಉಡುಪಿ: ಕುಂದಾಪುರ ತಾಲೂಕಿನ ಕಮಲಶಿಲೆ ದೇವಸ್ಥಾನದ ಗೋಶಾಲೆಯಲ್ಲಿ ಗೋವು ಕಳ್ಳತನ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನ ಬಜ್ಪೆ ನಿವಾಸಿಗಳಾದ ವಾಜೀದ್ ಜೆ (26) ಹಾಗೂ ಫೈಜಲ್ (40) ಬಂಧಿತ ಆರೋಪಿಗಳು. ಈ ಇಬ್ಬರು ಆರೋಪಿಗಳು ಜೂನ್ 16ರಂದು ಮುಂಜಾನೆ 2:30ಕ್ಕೆ ಗೋಶಾಲೆಗೆ ನುಗ್ಗಿ ಗೋವು ಕಳ್ಳತನಕ್ಕೆ ಯತ್ನಿಸಿದ್ದರು. ಈ ವೇಳೆ ತಕ್ಷಣವೇ ಎಚ್ಚೆತ್ತುಗೊಂಡ ದೇವಸ್ಥಾನದ ಭದ್ರತಾ ಸಿಬ್ಬಂದಿ ಗೋಶಾಲೆಗೆ ಬಂದಿದ್ದು, ಇದನ್ನು ಗಮನಿಸಿದ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದರು. ಗೋಕಳ್ಳರ ಕೈಚಳಕ ಗೋಶಾಲೆಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಕಾರ್ಯಾಚರಣೆಗೆ ಇಳಿದ ಪೊಲೀಸರು ಜೂನ್ 22ರಂದು ಇಬ್ಬರನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ ಹುಂಡೈ ಕ್ರೆಟಾ ಕಾರನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಬಳಿಕ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.