ಉಡುಪಿ: ಅರಬೀಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಮುಂದಿನ ಐದು ದಿನಗಳ ಕಾಲ ಕರಾವಳಿ ಕರ್ನಾಟಕದ ಹೆಚ್ಚಿನ ಕಡೆಗಳಲ್ಲಿ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅ.16ರಿಂದ 19ರವರೆಗೆ ಗಂಟೆಗೆ 35ರಿಂದ 45 ಕಿ.ಮೀ. ವೇಗದ ಗಾಳಿಯು ಬೀಸಲಿದ್ದು, ಕಡಲು ಪ್ರಕ್ಷುಬ್ಧವಾಗಿರಲಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆಯನ್ನೂ ನೀಡಲಾಗಿದೆ.
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸೂಚನೆ: ರಾಜ್ಯ ಕರಾವಳಿಯಲ್ಲಿ ಮುಂದಿನ ಐದು ದಿನಗಳ ಕಾಲ ಅಧಿಕ ಮಳೆಯಾಗುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಹಲವು ಸೂಚನೆಗಳನ್ನು ನೀಡಿದೆ.
ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ನಿಯೋಜನೆಗೊಂಡ ನೋಡೆಲ್ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು ವಿಪತ್ತು ನಿರ್ವಹಣೆ ಮಾಡಬೇಕು. ಪ್ರವಾಸಿಗರು, ಸಾರ್ವಜನಿಕರು, ಮೀನುಗಾರರು ನದಿ, ಜಲಪಾತ, ನೀರಿರುವ ಪ್ರದೇಶ ಹಾಗೂ ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ.