ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಇದರ ವತಿಯಿಂದ ನೀಡಲಾಗುವ ಪ್ರಭಾವತಿ ಹಾಗೂ ವಿಶ್ವನಾಥ್ ಶೆಣೈ ಪ್ರಾಯೋಜಿತ “ವಿಶ್ವಪ್ರಭಾ ಪುರಸ್ಕಾರ-2025″ಕ್ಕೆ ರಂಗಭೂಮಿ ಕಲಾವಿದ ನವೀನ್ ಡಿ. ಪಡೀಲ್ ಆಯ್ಕೆಯಾಗಿದ್ದಾರೆ.
ಈ ಕುರಿತು ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ವಿಶ್ವಪ್ರಭಾ ಪುರಸ್ಕಾರ ಸಮಿತಿ ಸಂಚಾಲಕ ಮರವಂತೆ ನಾಗರಾಜ್ ಹೆಬ್ಬಾರ್ ಅವರು, ಈ ಪುರಸ್ಕಾರವು 1 ಲಕ್ಷ ರೂ. ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಫೆಬ್ರವರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.
ನವೀನ್ ಡಿ ಪಡೀಲ್ ಅವರು ರಂಗಭೂಮಿ, ಚಲನಚಿತ್ರ ನಟರಾಗಿದ್ದು, ತುಳು ಭಾಷೆಯಲ್ಲಿ 15 ಸಾವಿರಕ್ಕೂ ಹೆಚ್ಚು ನಾಟಕಗಳಲ್ಲಿ ಅಭಿನಯಿಸಿದ್ದಾರೆ. ರಂಗಭೂಮಿ ಹಾಗೂ ಸಿನಿಮಾ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಪರಿಗಣಿಸಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಪ್ರತಿಷ್ಠಾನದ ಸ್ಥಾಪಕ ವಿಶ್ವನಾಥ್ ಶೆಣೈ, ಉಪಾಧ್ಯಕ್ಷರಾದ ಸಂಧ್ಯಾ ಶೆಣೈ, ವಿಘ್ನೇಶರ ಅಡಿಗ, ಸಂಚಾಲಕ ರವಿರಾಜ್ ಎಚ್.ಪಿ ಉಪಸ್ಥಿತರಿದ್ದರು.