ಉಡುಪಿ: ಕೆಂಪು ಕಲ್ಲು, ಮರಳು ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕರು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕಳೆದ ಮೂರು ದಿನಗಳಿಂದ ನಡೆಸುತ್ತಿದ್ದ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹವು ಜಂಟಿ ಸಭೆ ಕರೆಯುವ ಭರವಸೆ ಹಿನ್ನೆಲೆಯಲ್ಲಿ ಬುಧವಾರ ಅಂತ್ಯಗೊಂಡಿತು.
ಜಿಲ್ಲೆಯ ಸಾವಿರಾರು ಕಟ್ಟಡ ನಿರ್ಮಾಣ ಕಾರ್ಮಿಕರು ಮಣಿಪಾಲ ಟೈಗರ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಬೃಹತ್ ಮೆರವಣಿಗೆ ನಡೆಸಿದರು. ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿ ಗೇಟಿನ ಬಳಿ ಬರುತ್ತಿದ್ದಂತೆ ಪೋಲೀಸರು ಗೇಟ್ ಅನ್ನು ಬಂದ್ ಮಾಡಿ ಕಾರ್ಮಿಕರನ್ನು ತಡೆದರು. ಈ ಸಂದರ್ಭದಲ್ಲಿ ಪೋಲೀಸರು ಹೋರಾಟಗಾರರ ಮಧ್ಯೆ ಮಾತಿನ ಚಕಮಕಿ ಉಂಟಾಯಿತು. ಅಪರ ಜಿಲ್ಲಾಧಿಕಾರಿ ಮಧ್ಯೆ ಪ್ರವೇಶಿಸಿ ಮನವಿ ಸ್ವೀಕರಿಸಲು ಮುಂದಾದರು. ಆದರೆ ಪ್ರತಿಭಟನಾಕಾರರು ಕೇವಲ ಮನವಿ ಸ್ವೀಕರಿಸಿದರೆ ಸಾಲದು ಸಮಸ್ಯೆ ಇತ್ಯರ್ಥ ಪಡಿಸಬೇಕು ಎಂದು ಒತ್ತಾಯಿಸಿ ಜಂಟಿ ಸಭೆ ನಡೆಸಲು ಆಗ್ರಹಿಸಿದರು. ಪ್ರತಿಭಟನಾಕಾರರ ಒತ್ತಾಯಕ್ಕೆ ಮಣಿದ ಅಪರ ಜಿಲ್ಲಾಧಿಕಾರಿಗಳು ಆಗಸ್ಟ್ 30 ರಂದು ಜಂಟಿ ಸಭೆ ನಡೆಸಲು ಒಪ್ಪಿ ಲಿಖಿತ ಆದೇಶ ನೀಡಿದರು. ಆ ನಂತರ ಧರಣಿ ವಾಪಸ್ ಪಡೆಯಲಾಯಿತು.
ಆ ಬಳಿಕ ನಡೆದ ಸಭೆಯಲ್ಲಿ ಮಾತನಾಡಿದ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಅವರು, ಜಿಲ್ಲೆಯ ಜನಸಾಮಾನ್ಯರ ಸಮಸ್ಯೆಗಳನ್ನು ಬಗೆಹರಿಸಲು ರಾಜ್ಯದ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ಶಾಸಕರು ವಿಫಲರಾಗಿದ್ದಾರೆ. ಅಧಿಕಾರಿಗಳು ಕಠಿಣ ಕ್ರಮ ಜರುಗಿಸಿರುವುದರಿಂದ ಸಮಸ್ಯೆ ಉಲ್ಬಣಗೊಂಡಿದೆ. ಇದು ಬಡ ಕಾರ್ಮಿಕರ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ದೂರಿದರು.
ಕಟ್ಟಡ ಕಾರ್ಮಿಕರ ಸಂಘದ ರಾಜ್ಯ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಮಾತನಾಡಿ, ರಟ್ಟೆಯ ಬಿಟ್ಟರೆ ಆಸ್ತಿಯೇ ಇಲ್ಲದ ಕಟ್ಟಡ ಕಾರ್ಮಿಕರು ರಟ್ಟೆ ನಂಬಿ ಕುಟುಂಬ ನಿರ್ವಹಣೆಗೆ ಸಾಲ ಮಾಡಿದ್ದಾರೆ. ಆದರೆ ಜಿಲ್ಲಾಡಳಿತ ಕೆಲಸವನ್ನೇ ಕಸಿದುಕೊಂಡಿದೆ ಎಂದು ಹೇಳಿದರು.
ಉಡುಪಿ ಜಿಲ್ಲಾ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷ ಸುಭಾಷ್ ಚಂದ್ರ ನಾಯಕ್, ಪ್ರಧಾನ ಕಾರ್ಯದರ್ಶಿ ಶಶಿಧರ ಗೊಲ್ಲ, ಬೈಂದೂರು ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷ ರಾಜೀವ್ ಪಡುಕೋಣೆ, ಕಾರ್ಯದರ್ಶಿ ರೊನಾಲ್ಡ್ ರಾಜೇಶ್ ಕ್ವಾಡ್ರಸ್,ಸಿಐಟಿಯು ಮುಖಂಡರಾದ ಎಚ್ ನರಸಿಂಹ ಚಂದ್ರಶೇಖರ ವಿ, ಸಿಐಟಿಯು ಉಡುಪಿ ಜಿಲ್ಲಾ ಕಾರ್ಯದರ್ಶಿ ಕವಿರಾಜ್ ಎಸ್ ಕಾಂಚನ್, ಸಿಐಟಿಯು ಜಿಲ್ಲಾ ಅಧ್ಯಕ್ಷರಾದ ಕೆ ಶಂಕರ್ ಮೊದಲಾದವರಿದ್ದರು.

