ಉಡುಪಿ: ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಅವ್ಯವಹಾರದ ಹಿಂದೆ ದೊಡ್ಡ ಜಾಲವೊಂದಿದ್ದು, ಇದರಲ್ಲಿ ಹಿಂದಿನ ಬಿಜೆಪಿ ಸರಕಾರ ಹಾಗೂ ಪ್ರಸ್ತುತ ಆಡಳಿತ ಮಂಡಳಿಯ ಕೈವಾಡವಿದೆ. ಸುಮಾರು 14 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಲೂಟಿಯಾಗಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಆರೋಪಿಸಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಗುಜರಿ ಮಾರಾಟ ಪ್ರಕ್ರಿಯೆಯಲ್ಲಿ ನಡೆದಿರುವ ಭಾರೀ ಪ್ರಮಾಣದ ಅವ್ಯವಹಾರ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇದೇ ಅ.9ರಂದು ಬ್ರಹ್ಮಾವರದಲ್ಲಿ ಬೃಹತ್ ಪ್ರತಿಭಟನಾ ಸಭೆಯನ್ನು ಆಯೋಜಿಸಲಾಗಿದೆ. ಈ ಪ್ರತಿಭಟನಾ ಸಭೆಯಲ್ಲಿ ಜಿಲ್ಲೆಯ ರೈತರು ಹಾಗೂ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದ್ದಾರೆ.
ಇತ್ತೀಚೆಗೆ ಕಾರ್ಖಾನೆಯ ವಾರ್ಷಿಕ ಮಹಾಸಭೆಯ ವೇಳೆ ರೈತರು ಸಭೆಗೆ ಹಾಜರಾಗದಂತೆ ತಡೆಯುವ ನಿಟ್ಟಿನಲ್ಲಿ ಕಾರ್ಖಾನೆಯ ಆಡಳಿತ ಮಂಡಳಿ ಅಧ್ಯಕ್ಷ ಬಾಡಿಗೆ ಗೂಂಡಾಗಳನ್ನು ಇಟ್ಟುಕೊಂಡು, ಭ್ರಷ್ಟಾಚಾರವನ್ನು ಪ್ರಶ್ನಿಸಬಾರದು ಎಂಬ ನಿಟ್ಟಿನಲ್ಲಿ ವರ್ತನೆ ತೋರಿಸಿದ್ದರು. ಇದು ಜಿಲ್ಲೆಯ ರೈತ ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ ಎಂದರು.