ಉಡುಪಿ: ಬೆಂಗಳೂರಿನಲ್ಲಿ ಕಾಂಗ್ರೆಸ್ ನ ಮಾಜಿ ಕಾರ್ಪೊರೇಟರ್ ಮನೆಯಲ್ಲಿ 42 ಕೋಟಿ ಅಕ್ರಮ ಹಣ ಪತ್ತೆಯಾಗಿರುವುದನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಬಿಜೆಪಿ ಕಚೇರಿಯ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.
ರಾಜ್ಯ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕೆಲಸ ಮಾಡುವುದನ್ನು ಬಿಟ್ಟು ಭ್ರಷ್ಟಾಚಾರದಲ್ಲಿ ತೊಡಗಿದೆ. ಭ್ರಷ್ಟಾಚಾರದಲ್ಲಿ ಸಂಗ್ರಹಿಸಿದ ಹಣವನ್ನು ಪಂಚರಾಜ್ಯಗಳ ಚುನಾವಣೆಗೆ ಬಳಸಲು ಉದ್ದೇಶಿಸಿತ್ತು ಎಂಬ ಸುದ್ದಿ ಹರಿದಾಡುತ್ತಿದೆ. ಇದಕ್ಕೆ ಕಾಂಗ್ರೆಸ್ ಕೂಡಲೇ ಸ್ಪಷ್ಟೀಕರಣ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯಕುಮಾರ್ ಶೆಟ್ಟಿ, ಮಾಜಿ ಶಾಸಕ ರಘುಪತಿ ಭಟ್, ಮುಖಂಡರಾದ ಮಟ್ಟಾರು ರತ್ನಾಕರ ಹೆಗ್ಡೆ, ರವಿ ಅಮೀನ್, ಅಂಡಾರು ದೇವಿಪ್ರಸಾದ್ ಶೆಟ್ಟಿ, ಮಂಜುನಾಥ್ ಮಣಿಪಾಲ್, ದಾವೂದ್ ಅಬುಬಕ್ಕರ್, ಸತ್ಯಾನಂದ ನಾಯಕ್, ಶಿವಕುಮಾರ್ ಅಂಬಲಪಾಡಿ ಮೊದಲಾದವರು ಉಪಸ್ಥಿತರಿದ್ದರು.