ಉಡುಪಿ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್, ಕರ್ನಾಟಕ ರಾಜ್ಯ ಸಹಕಾರ ಮಂಡಳ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಹಾಗೂ ಉಡುಪಿ ಜಿಲ್ಲಾ ಸಮಸ್ತ ಸಹಕಾರ ಸಂಸ್ಥೆಗಳ ಸಹಯೋಗದೊಂದಿಗೆ ಜನವರಿ 7ರಂದು ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ಉಡುಪಿ ಜಿಲ್ಲಾ ಸಹಕಾರ ಸಂಸ್ಥೆಗಳ ನೌಕರರು ಹಾಗೂ ಆಡಳಿತ ಮಂಡಳಿ ಸದಸ್ಯರು, ನವೋದಯ ಸ್ವ ಸಹಾಯ ಗುಂಪುಗಳ ಸದಸ್ಯರ ಸಹಕಾರಿ ಕ್ರೀಡಾಕೂಟ ‘ಸಪ್ತವರ್ಣ-2024’ ಅನ್ನು ಆಯೋಜಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು.
ಉಡುಪಿಯ ಡಯನಾ ಹೊಟೇಲ್ ಸಭಾಂಗಣದಲ್ಲಿ ಇಂದು ಆಯೋಜಿಸಿದ ಸಮಾಲೋಚನಾ ಸಭೆಯ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಅಂದು ಏಳು ತಾಲೂಕುಗಳ ಸಹಕಾರಿ ತಂಡಗಳಿಂದ ಆಕರ್ಷಕ ಪಥ ಸಂಚಲನ ನಡೆಯಲಿದ್ದು, 15 ಸಾವಿರ ಜನರು ಭಾಗವಹಿಸಲಿದ್ದಾರೆ. ಉತ್ತಮ ಪಥ ಸಂಚಲನ ನಡೆಸುವ ತಂಡಕ್ಕೆ ಅಕರ್ಷಕ ಬಹುಮಾನ ನೀಡುವ ಬಗ್ಗೆ ತೀರ್ಮಾನಿಸಲಾಗುವುದು ಎಂದರು.
ಈ ಕ್ರೀಡಾಕೂಟವು ಸಮಸ್ತ ಸಹಕಾರಿಗಳ ಒಗ್ಗಟ್ಟು ಪ್ರದರ್ಶನಕ್ಕೆ ವೇದಿಕೆಯಾಗಿದ್ದು, ಒಟ್ಟು ನಾಲ್ಕು ವಿಭಾಗದಲ್ಲಿ ಈ ಕ್ರೀಡಾಕೂಟ ನಡೆಯಲಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ, ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಐಕಳ ದೇವಿ ಪ್ರಸಾದ್ ಶೆಟ್ಟಿ, ರಾಜು ಪೂಜಾರಿ, ವಾದಿರಾಜ ಶೆಟ್ಟಿ, ರಾಜೇಶ್ ರಾವ್ ಪಾಂಗಳ, ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ಮಂಜಯ್ಯ ಶೆಟ್ಟಿ, ಉಪಾಧ್ಯಕ್ಷ ಅಶೋಕ್ ಕುಮಾರ್ ಬಲ್ಲಾಳ್, ಸಹಕಾರ ಸಂಘಗಳ ಸಹಾಯಕ ನಿಬಂಧಕ ಅರುಣ್ ಕುಮಾರ್ ಇದ್ದರು