Saturday, July 18, 2026

ಆಗುಂಬೆ ಘಾಟಿಯಲ್ಲಿ ಸುರಂಗ ನಿರ್ಮಾಣ ಕುರಿತು ಇನ್ನೂ ಅಂತಿಮ ನಿರ್ಧಾರ ಆಗಿಲ್ಲ: ಸಚಿವ ಸತೀಶ್ ಜಾರಕಿಹೊಳಿ

Must read

ಉಡುಪಿ: ಆಗುಂಬೆ ಘಾಟಿಯಲ್ಲಿ ಸುರಂಗ (ಟನಲ್) ನಿರ್ಮಾಣ ಹಾಗೂ ರಸ್ತೆ ಅಗಲೀಕರಣ ಕುರಿತು ಇದುವರೆಗೆ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಅವರು ಬುಧವಾರ ಆಗುಂಬೆ ಘಾಟಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆಗುಂಬೆ ಘಾಟಿಯಲ್ಲಿ ಡಬಲ್ ರಸ್ತೆ ನಿರ್ಮಾಣಕ್ಕೆ ಅರಣ್ಯ ಇಲಾಖೆ ಹಾಗೂ ವನ್ಯಜೀವಿ ಇಲಾಖೆಯ ಅನುಮತಿ ಸೇರಿದಂತೆ ಹಲವು ಸವಾಲುಗಳಿವೆ. ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಮೊದಲು ಹೆಬ್ರಿ ಮತ್ತು ಕಾರ್ಕಳ ವ್ಯಾಪ್ತಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಬಳಿಕ ಬೆಂಗಳೂರಿನಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಆಗುಂಬೆ ಘಾಟಿ ರಸ್ತೆ ಅಗಲೀಕರಣದ ಸಾಧ್ಯತೆಗಳನ್ನು ಪರಿಶೀಲಿಸುವ ಉದ್ದೇಶದಿಂದಲೇ ಸ್ಥಳಕ್ಕೆ ಭೇಟಿ ನೀಡಿದ್ದೇನೆ ಎಂದು ಹೇಳಿದರು.
ಕೇಂದ್ರ ಸರ್ಕಾರ ಆಗುಂಬೆ ಟನಲ್ ಯೋಜನೆಗೆ ಟೆಂಡರ್ ಆಹ್ವಾನಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಟೆಂಡರ್ ಕರೆದಿದ್ದರೂ ಇದುವರೆಗೆ ಯಾರೂ ಅರ್ಜಿ ಸಲ್ಲಿಸಿಲ್ಲ. ಡಿಪಿಆರ್ ಸೇರಿದಂತೆ ಹಲವು ವಿಷಯಗಳಲ್ಲಿಯೂ ಇನ್ನೂ ಸ್ಪಷ್ಟತೆ ಇಲ್ಲ ಎಂದು ತಿಳಿಸಿದರು.
ಸಕಲೇಶಪುರ ಘಾಟಿಯ ಸಮಸ್ಯೆಯನ್ನು ಮೂರು ವರ್ಷಗಳಲ್ಲಿ ಪರಿಹರಿಸಲಾಗಿದೆ. ಚಾರ್ಮಾಡಿ ಘಾಟಿ ದುರಸ್ತಿಗೆ ಸಂಬಂಧಿಸಿದಂತೆ ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಸಚಿವರು ಹೇಳಿದರು.
ಸಿಎಂ ದೆಹಲಿ ಪ್ರವಾಸದ ಬಗ್ಗೆ ಮಾಹಿತಿ ಇಲ್ಲ:
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ದೆಹಲಿ ಪ್ರವಾಸದ ಕುರಿತು ಪ್ರತಿಕ್ರಿಯಿಸಿದ ಸಚಿವರು, ಅದರ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಅದು ಅವರ ವೈಯಕ್ತಿಕ ಅಥವಾ ಮಂತ್ರಿಮಂಡಲಕ್ಕೆ ಸಂಬಂಧಿಸಿದ ಕೆಲಸವಾಗಿರಬಹುದು ಎಂದರು.
ಸಚಿವ ಸ್ಥಾನ ಹೈಕಮಾಂಡ್ ನಿರ್ಧಾರ:
ಬೆಳಗಾವಿ ಜಿಲ್ಲೆಗೆ ಸಚಿವ ಸ್ಥಾನ ನೀಡುವ ಕುರಿತು ಕೇಳಿದ ಪ್ರಶ್ನೆಗೆ, ಅಲ್ಲಿ ಹಲವು ಹಿರಿಯ ಶಾಸಕರಿದ್ದಾರೆ. ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ. ಪಕ್ಷದ ಯಾರಿಗೇ ಅವಕಾಶ ನೀಡಿದರೂ ಸ್ವಾಗತ ಎಂದು ಹೇಳಿದರು.
ಬರ ಪರಿಹಾರಕ್ಕೆ ಕೇಂದ್ರ ನೆರವು ಅಗತ್ಯ:
ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿರುವುದಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಈ ವಿಚಾರದಲ್ಲಿ ಬಿಜೆಪಿ ವಿರೋಧಿಸುವ ಅಗತ್ಯವಿಲ್ಲ. ಬರ ನಿರ್ವಹಣೆಗೆ ಕೇಂದ್ರ ಸರ್ಕಾರದ ನೆರವು ಅತ್ಯಗತ್ಯ. ರಾಜ್ಯ ಸರ್ಕಾರ ತನ್ನ ಜವಾಬ್ದಾರಿಯಂತೆ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಲಿದೆ. ಮಳೆ ಕೊರತೆ ಮುಂದುವರಿದರೆ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

spot_img

More articles

LEAVE A REPLY

Please enter your comment!
Please enter your name here