ಉಡುಪಿ: ನೀಟ್ ಪರೀಕ್ಷೆ ವಿಚಾರವಾಗಿ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ವೇಳೆ ಆರ್‌ಎಎಫ್ ಹಾಗೂ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾ ಕಾರ್ಯದರ್ಶಿ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು ಹೇಳಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ನ್ಯಾಯಕ್ಕಾಗಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುವುದು ಸಂವಿಧಾನಬದ್ಧ ಹಕ್ಕು. ಆದರೆ ಕಾನೂನು ಕೈಗೆತ್ತಿಕೊಂಡು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸುವುದು ಯಾವುದೇ ಕಾರಣಕ್ಕೂ ಸಮರ್ಥನೀಯವಲ್ಲ ಎಂದು ಹೇಳಿದ್ದಾರೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಬೆಳಕಿಗೆ ಬಂದ ತಕ್ಷಣ ಕೇಂದ್ರ ಸರ್ಕಾರ ತನಿಖೆಗೆ ಆದ್ಯತೆ ನೀಡಿ, ಪ್ರಕರಣವನ್ನು ಸಿಬಿಐಗೆ ವಹಿಸಿದೆ. ಅಕ್ರಮಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿರುವುದಾಗಿ ಅವರು ಹೇಳಿದ್ದಾರೆ.
ಜಂತರ್ ಮಂತರ್ ಹಾಗೂ ‘ಸಂಸದ್ ಚಲೋ’ ಹೆಸರಿನಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಸಾರ್ವಜನಿಕ ಶಾಂತಿ ಮತ್ತು ಸಂಚಾರಕ್ಕೆ ಅಡಚಣೆ ಉಂಟುಮಾಡುತ್ತಿವೆ. ಟ್ರಾಫಿಕ್ ಜಾಮ್‌ನಿಂದ ಆಂಬ್ಯುಲೆನ್ಸ್, ಶಾಲಾ ವಾಹನಗಳು ಹಾಗೂ ಉದ್ಯೋಗಿಗಳ ಸಂಚಾರಕ್ಕೂ ತೊಂದರೆಯಾಗಿದ್ದು, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗುತ್ತಿರುವುದು ವಿಷಾದನೀಯ ಎಂದು ಟೀಕಿಸಿದ್ದಾರೆ.
ಕರ್ತವ್ಯ ನಿರ್ವಹಿಸುತ್ತಿದ್ದ ಆರ್‌ಎಎಫ್ ಮತ್ತು ದೆಹಲಿ ಪೊಲೀಸ್ ಸಿಬ್ಬಂದಿ ಮೇಲೆ ಕಲ್ಲು ತೂರಾಟ ನಡೆಸಿರುವುದು ದುಃಖಕರ. ವಿದ್ಯಾರ್ಥಿಗಳ ಹೆಸರಿನಲ್ಲಿ ಹಿಂಸೆ ಮತ್ತು ಅರಾಜಕತೆ ಸೃಷ್ಟಿಸುವುದು ಸರಿಯಲ್ಲ ಎಂದು ಅವರು ಹೇಳಿದ್ದಾರೆ.
ವಿದ್ಯಾರ್ಥಿಗಳ ಭವಿಷ್ಯ ಸುರಕ್ಷಿತವಾಗಿರಬೇಕು, ಪರೀಕ್ಷಾ ವ್ಯವಸ್ಥೆ ಪಾರದರ್ಶಕವಾಗಿರಬೇಕು ಹಾಗೂ ನ್ಯಾಯ ದೊರೆಯಬೇಕು ಎಂಬುದು ಎಲ್ಲರ ಆಶಯ. ಆದರೆ ಈ ವಿಷಯವನ್ನು ರಾಜಕೀಯ ಲಾಭಕ್ಕಾಗಿ ಬಳಸದೆ, ಕಾನೂನು ಮತ್ತು ಸಂವಿಧಾನದ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಪರಿಹರಿಸಬೇಕು ಎಂದು ಶ್ರೀನಿಧಿ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಹೆಸರಿನಲ್ಲಿ ಅರಾಜಕತೆ ಖಂಡನೀಯ: ಶ್ರೀನಿಧಿ ಹೆಗ್ಡೆ
More articles

