ಉಡುಪಿ: ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್‌ನಲ್ಲಿ ಪ್ರಿನ್ಸ್ ಎಂಟರ್‌ಪ್ರೈಸಸ್ ಮಾಲೀಕ ಡೇವಿಡ್ ಡಿಸೋಜಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯಕ್ಕೆ ಹಣ ವರ್ಗಾವಣೆ ಮೂಲಕ ಸಹಕರಿಸಿದ ಆರೋಪದ ಮೇಲೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳನ್ನು ಕಾಪು ತಾಲ್ಲೂಕಿನ ಎರ್ಮಾಳ್ ತೆಂಕದ ಚಿರಾಗ್ ಪೂಜಾರಿ (26) ಹಾಗೂ ಮೊಹಮ್ಮದ್ ಇರ್ಷಾದ್ (43) ಎಂದು ಗುರುತಿಸಲಾಗಿದೆ. ಇಬ್ಬರನ್ನೂ ಬುಧವಾರ ಪೊಲೀಸರು ಬಂಧಿಸಿದ್ದಾರೆ.
ಮುದರಂಗಡಿ ಚರ್ಚ್ ಕಾಂಪ್ಲೆಕ್ಸ್‌ನಲ್ಲಿ ಮೋಟಾರ್‌ಸೈಕಲ್‌ನಲ್ಲಿ ಬಂದಿದ್ದ ಆರೋಪಿಗಳ ಪೈಕಿ ಸಹಸವಾರ ಪಿಸ್ತೂಲ್‌ನಿಂದ ಡೇವಿಡ್ ಡಿಸೋಜಾ ಅವರ ತಲೆಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದ. ಈ ಕುರಿತು ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಪ್ರಕರಣದ ತನಿಖೆ ವೇಳೆ ಈಗಾಗಲೇ ಕೃತ್ಯದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಹೆಚ್ಚಿನ ವಿಚಾರಣೆ ನಡೆಸಿದಾಗ ಆರೋಪಿಗಳಿಗೆ ಹಣ ವರ್ಗಾವಣೆ ಮಾಡಲು ಸಹಕರಿಸಿದ ಇಬ್ಬರ ಪಾತ್ರ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಚಿರಾಗ್ ಪೂಜಾರಿ ಮತ್ತು ಮೊಹಮ್ಮದ್ ಇರ್ಷಾದ್ ಅವರನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿರುವ ಪೊಲೀಸರು, ಪ್ರಕರಣದ ಹಿನ್ನೆಲೆ ಹಾಗೂ ಹಣದ ವಹಿವಾಟಿನ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಹಣ ವರ್ಗಾವಣೆಗೆ ಸಹಕರಿಸಿದ ಇಬ್ಬರ ಬಂಧನ
More articles

