ಉಡುಪಿ: ಮನೆಮನೆಗೆ ಪೈಪ್‌ಲೈನ್ ಮೂಲಕ ಅಡುಗೆ ಅನಿಲ ಪೂರೈಸುವ ಯೋಜನೆಯಡಿ ನವೆಂಬರ್ ಮೊದಲ ವಾರದಲ್ಲಿ ಉಡುಪಿ ನಗರದಲ್ಲಿ ಗ್ಯಾಸ್ ವಿತರಣೆ ಆರಂಭಿಸುವುದಾಗಿ ಅದಾನಿ ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಯೋಜನೆಯ ಅನುಷ್ಠಾನದ ಕುರಿತು ಚರ್ಚಿಸಲಾಯಿತು.
ಸುಮಾರು 25 ಸಾವಿರ ಕುಟುಂಬಗಳಿಗೆ ಸಂಪರ್ಕ ಕಲ್ಪಿಸುವ ಯೋಜನೆ ಆರೇಳು ವರ್ಷಗಳಿಂದ ವಿಳಂಬವಾಗುತ್ತಿರುವ ಬಗ್ಗೆ ಅಧಿಕಾರಿಗಳನ್ನು ಪ್ರಶ್ನಿಸಿದ ಕೋಟ, ಪಣಂಬೂರಿನಿಂದ ಕರಾವಳಿ ಜಂಕ್ಷನ್‌ವರೆಗೆ ಸುಮಾರು 48 ಕಿ.ಮೀ. ಪೈಪ್‌ಲೈನ್ ವಿಸ್ತರಿಸಲಾಗಿದೆ. ಕರಾವಳಿ ಜಂಕ್ಷನ್‌ನಿಂದ ಮಣಿಪಾಲದ ಕಾಯಿನ್ ಸರ್ಕಲ್‌ವರೆಗೆ ಸಂಪರ್ಕ ಕಲ್ಪಿಸಿದ್ದರೂ ಮನೆಮನೆಗೆ ಗ್ಯಾಸ್ ವಿತರಣೆ ಆರಂಭಿಸಲು ವಿಳಂಬ ಮಾಡುತ್ತಿರುವುದು ಸರಿಯಲ್ಲ. ತಕ್ಷಣ ವಿತರಣೆ ಆರಂಭಿಸಬೇಕು ಎಂದು ಒತ್ತಾಯಿಸಿದರು.
ಮೊದಲ ಹಂತದಲ್ಲಿ ಸುಮಾರು 2 ಸಾವಿರ ಕುಟುಂಬಗಳಿಗೆ ಸಂಪರ್ಕ ಕಲ್ಪಿಸಲಾಗುತ್ತಿದೆ. ಒಟ್ಟು 300 ಕಿ.ಮೀ. ವ್ಯಾಪ್ತಿಯ ಪೈಪ್‌ಲೈನ್ ವಿತರಣಾ ಜಾಲ ನಿರ್ಮಿಸುವ ಗುರಿ ಹೊಂದಿದ್ದು, ಈಗಾಗಲೇ ಸುಮಾರು 200 ಕಿ.ಮೀ. ಸಂಪರ್ಕ ಕಲ್ಪಿಸಲಾಗಿದೆ. ಮಳೆಗಾಲದಲ್ಲಿ ಕಾಮಗಾರಿ ನಡೆಸದಂತೆ ನಗರಸಭೆ ಅಧಿಕಾರಿಗಳು ಸೂಚಿಸಿದ್ದರಿಂದ ಕಾಮಗಾರಿ ಸ್ಥಗಿತಗೊಂಡಿತ್ತು. ಅಕ್ಟೋಬರ್‌ನಲ್ಲಿ ಕಾಮಗಾರಿ ಪುನರಾರಂಭಿಸಿ, ನವೆಂಬರ್ ಮೊದಲ ವಾರದಲ್ಲಿ ಮನೆಮನೆಗೆ ಅಡುಗೆ ಅನಿಲ ಸಂಪರ್ಕ ನೀಡುವಂತೆ ಅದಾನಿ ಸಂಸ್ಥೆಗೆ ಸೂಚಿಸಲಾಗಿದೆ. ನಗರಸಭೆಯ ಮಹತ್ವಾಕಾಂಕ್ಷಿ ಯೋಜನೆಯ ಅನುಷ್ಠಾನದಲ್ಲಿ ವಿಳಂಬ ಸಲ್ಲದು. ಸಂಸದರ ಮಾರ್ಗದರ್ಶನದಲ್ಲಿ ತಕ್ಷಣ ಕಾಮಗಾರಿ ಕೈಗೊಂಡು ನಿಗದಿತ ಅವಧಿಯಲ್ಲಿ ಸಂಪರ್ಕ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸೂಚಿಸಿದರು.
ಗೇಲ್ ಸಂಸ್ಥೆಯು ಅನಿಲ ಸರಬರಾಜು ವ್ಯವಸ್ಥೆಗೆ ಸಂಬಂಧಿಸಿದ ಕಾಮಗಾರಿ ಪೂರ್ಣಗೊಳಿಸಿದೆ. ಪಣಂಬೂರಿನ ಗ್ಯಾಸ್ ವಿತರಣಾ ವ್ಯವಸ್ಥೆಯ ಯೋಜನೆ ಪೂರ್ಣಗೊಂಡಿರುವುದರಿಂದ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಎನ್‌ಜಿ ವಿತರಣಾ ಕೇಂದ್ರಗಳಿಗೆ ಸಮಯಕ್ಕೆ ಸರಿಯಾಗಿ ಸಿಎನ್‌ಜಿ ಪೂರೈಸುವ ಬಗ್ಗೆಯೂ ಸಭೆಯಲ್ಲಿ ಮಾಹಿತಿ ನೀಡಲಾಯಿತು. ಅರ್ಜಿ ಸಲ್ಲಿಸಿರುವ ಇತರ ವಿತರಣಾ ಸಂಸ್ಥೆಗಳಿಗೆ ಗ್ಯಾಸ್ ಸಂಪರ್ಕ ಕಲ್ಪಿಸುವ ಬಗ್ಗೆಯೂ ಚರ್ಚಿಸಲಾಯಿತು.
ಸಭೆಯಲ್ಲಿ ಅದಾನಿ ಕಂಪನಿಯ ಯೋಜನಾ ಅನುಷ್ಠಾನಾಧಿಕಾರಿ ರಾಹುಲ್, ನಗರಸಭೆಯ ಕಾರ್ಯಪಾಲಕ ಎಂಜಿನಿಯರ್ ದುರ್ಗಾಪ್ರಸಾದ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸುಬ್ರಹ್ಮಣ್ಯ, ಗೇಲ್ ಕಂಪನಿಯ ಡೆಪ್ಯುಟಿ ಜನರಲ್ ಮ್ಯಾನೇಜರ್ ಪ್ರಿನ್ಸ್ ಲಾರೆನ್ಸ್ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಮ್ಯಾನೇಜರ್ ಪ್ರಕಾಶ್ ಉಪಸ್ಥಿತರಿದ್ದರು.
ನವೆಂಬರ್ ಮೊದಲ ವಾರ ಉಡುಪಿ ನಗರದಲ್ಲಿ ಪೈಪ್‌ಲೈನ್ ಮೂಲಕ ಗ್ಯಾಸ್ ವಿತರಣೆ

