ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಆರೋಪಕ್ಕೆ ಗುರಿಯಾಗಿರುವ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಬಿ. ನಾಗೇಂದ್ರ ಅವರು ಕೊನೆಗೂ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.
ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಪ್ರತಿಪಕ್ಷಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಶೂದ್ರರು ಮತ್ತು ಆದಿವಾಸಿಗಳು ಸ್ವತಂತ್ರವಾಗಿ ಬದುಕಬಾರದು ಎಂಬ ನಿಲುವನ್ನು ಪ್ರತಿಪಕ್ಷದವರು ಹೊಂದಿದ್ದಾರೆ. ಈಗಲೂ ಮನುಸ್ಮೃತಿ ಜಾರಿಗೆ ತರಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.
ಸದನದ ಕಲಾಪಕ್ಕೆ ಅಡ್ಡಿಪಡಿಸುವ ಮೂಲಕ ಸಂವಿಧಾನ ವಿರೋಧಿ ನಡೆ ಅನುಸರಿಸುತ್ತಿದ್ದಾರೆ ಎಂದು ಅವರು ಟೀಕಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡುವ ವೇಳೆ ನಾಗೇಂದ್ರ ಅವರು ಭಾವುಕರಾಗಿ ಕಣ್ಣೀರಿಟ್ಟರು. ‘ನನ್ನಿಂದ ಪಕ್ಷಕ್ಕೆ ಯಾವುದೇ ಮುಜುಗರವಾಗಬಾರದು’ ಎಂದು ಹೇಳಿದ ಅವರು, ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ನಿರ್ಧಾರ ಪ್ರಕಟಿಸಿದರು.
ದಲಿತರು ಹಿಂದಿನಂತಿಲ್ಲ. ಎಲ್ಲವನ್ನೂ ಗಮನಿಸುತ್ತಿದ್ದಾರೆ. ಪ್ರತಿಪಕ್ಷಗಳು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಅವರು ಎಚ್ಚರಿಕೆ ನೀಡಿದರು.
ಕಣ್ಣೀರಿಡುತ್ತಾ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಾಗೇಂದ್ರ

