ಉಡುಪಿ: ಉತ್ತರಾಖಂಡದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ನಡೆದ ರ‍್ಯಾಲಿಯ ಬಳಿಕ ಬಿಜೆಪಿ ಕಾರ್ಯಕರ್ತರು ನಡೆಸಿದ ಶುದ್ಧೀಕರಣದಂತಹ ಜಾತಿವಾದಿ ಕೃತ್ಯವನ್ನು ಖಂಡಿಸಿ ಧ್ವನಿ ಎತ್ತಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ದಾಖಲಿಸಿರುವ ಎಫ್‌ಐಆರ್ ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಂಗಳವಾರ ಬ್ರಹ್ಮಗಿರಿ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಯಿತು.
ಕಾಂಗ್ರೆಸ್ ಭವನದಿಂದ ಬ್ರಹ್ಮಗಿರಿ ಸರ್ಕಲ್‌ವರೆಗೆ ಪಾದಯಾತ್ರೆ ನಡೆಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸಂವಿಧಾನದ ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಭಾತೃತ್ವದ ಮೌಲ್ಯಗಳನ್ನು ರಕ್ಷಿಸುವಂತೆ ಆಗ್ರಹಿಸಿದರು. ಉತ್ತರಾಖಂಡ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ರಾಹುಲ್ ಗಾಂಧಿ ವಿರುದ್ಧ ದಾಖಲಿಸಿರುವ ಎಫ್‌ಐಆರ್ ಅನ್ನು ಕೂಡಲೇ ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.
ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್ ಮಾತನಾಡಿ, ಜಾತಿವಾದ ಮತ್ತು ಅಸ್ಪೃಶ್ಯತೆಯ ವಿರುದ್ಧ ಧ್ವನಿ ಎತ್ತಿದ ರಾಹುಲ್ ಗಾಂಧಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿರುವುದು ಸಂವಿಧಾನದ ಮೂಲ ಆಶಯಕ್ಕೆ ಧಕ್ಕೆ ತರುವ ಕ್ರಮವಾಗಿದೆ. ಕೇಂದ್ರ ಹಾಗೂ ಉತ್ತರಾಖಂಡ ಸರ್ಕಾರದ ನಡೆ ಖಂಡನೀಯ. ಕೂಡಲೇ ಎಫ್‌ಐಆರ್ ರದ್ದುಪಡಿಸಬೇಕು ಎಂದು ಆಗ್ರಹಿಸಿದರು.
ಕೆಪಿಸಿಸಿ ವಕ್ತಾರೆ ವೆರನಿಕಾ ಕರ್ನೇಲಿಯೋ ಮಾತನಾಡಿ, ಬಿಜೆಪಿ ಆಡಳಿತಕ್ಕೆ ಬಂದ ಬಳಿಕ ಪ್ರಜಾಪ್ರಭುತ್ವದ ಬುನಾದಿಯೇ ಅಲುಗಾಡುತ್ತಿದೆ. ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಧ್ವನಿಯನ್ನು ದಮನಿಸುವ ಪ್ರಯತ್ನ ನಡೆಯುತ್ತಿದೆ. ರಾಹುಲ್ ಗಾಂಧಿ ಅವರ ವಿರುದ್ಧ ಅವಹೇಳನ ಹಾಗೂ ಅಪಪ್ರಚಾರ ನಡೆಸಲಾಗುತ್ತಿದ್ದು, ಇದರ ವಿರುದ್ಧ ಕಾಂಗ್ರೆಸ್ ಹೋರಾಟ ಮುಂದುವರಿಸಲಿದೆ ಎಂದರು.
ಚಿಂತಕ ಡಾ. ಗಣನಾಥ ಎಕ್ಕಾರು ಮಾತನಾಡಿದರು.
ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್, ಸತೀಶ್ ಕೊಡವೂರು, ಗಣೇಶ್ ನೆರ್ಗಿ, ಪ್ರಖ್ಯಾತ್ ಶೆಟ್ಟಿ, ಭಾಸ್ಕರ್ ರಾವ್ ಕಿದಿಯೂರು, ಗೀತಾ ವಾಗ್ಳೆ, ಡಾ. ಸುನೀತಾ ಶೆಟ್ಟಿ, ಮೀನಾಕ್ಷಿ ಮಾಧವ ಬನ್ನಂಜೆ, ರೋಶನಿ ಒಲಿವೆರಾ, ಶಶಿಧರ್ ಶೆಟ್ಟಿ ಎರ್ಮಾಳು, ಗಣೇಶ್ ರಾಜ್ ಸರಳೇಬೆಟ್ಟು, ಮಹಾಬಲ ಕುಂದರ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

