ಉಡುಪಿ: ಪಡಿತರ ಅಕ್ಕಿ ಚೀಲಗಳನ್ನು ಮನೆಯ ಅಂಗಳದಲ್ಲಿ ದಾಸ್ತಾನು ಮಾಡಿರುವುದಾಗಿ ಆರೋಪಿಸಿ ವ್ಯಕ್ತಿಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಗೂ ಸುಲಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಕೋಟ ಪೊಲೀಸರು ಮೈಸೂರು ನಗರದಲ್ಲಿ ಬಂಧಿಸಿದ್ದಾರೆ.
ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ಆರೋಪಿಗಳಾದ ನಾಗೇಂದ್ರ ಪುತ್ರನ್ ಅಲಿಯಾಸ್ ನಾಗೇಂದ್ರ ಕೆ.ಕೆ. (37) ಹಾಗೂ ಪಿ. ಸುಮಂತ್ ಕುಂದರ್ (40) ಅವರನ್ನು ಸೆ.2ರಂದು ಮೈಸೂರು ಅರಮನೆ ಎದುರಿನ ವಸ್ತು ಪ್ರದರ್ಶನ ಮೈದಾನದ ಬಳಿ ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ಮತ್ತೊಬ್ಬ ಆರೋಪಿ ಸಚಿನ್ ಶ್ರೀಯಾನ್ (32) ಎಂಬಾತನನ್ನು ಸೆ.1ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ಉಡುಪಿ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಕೆ.ಯು. ಹಾಗೂ ಬ್ರಹ್ಮಾವರ ವೃತ್ತ ನಿರೀಕ್ಷಕ ಗೋಪಿಕೃಷ್ಣ ಅವರ ಮಾರ್ಗದರ್ಶನದಲ್ಲಿ ಕೋಟ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರವೀಣ ಕುಮಾರ್ ಆರ್., ಮಹಾಂತೇಶ ಜಾಬಗೌಡ ಹಾಗೂ ಸಿಬ್ಬಂದಿ ವಿಜಯೇಂದ್ರ, ಶರತ್ ಮತ್ತು ಶಿವರಾಜ್ ಅವರ ತಂಡ ಆರೋಪಿಗಳ ಪತ್ತೆ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದೆ.

