ಉಡುಪಿ: ಮಣಿಪಾಲದ ಟೈಗರ್ ಸರ್ಕಲ್‌ನಿಂದ ಕೆನರಾ ಬ್ಯಾಂಕ್ ಕಡೆಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಡಾಂಬರು ಹಾಕಿದ ನಾಲ್ಕೇ ತಿಂಗಳಲ್ಲಿ ರಸ್ತೆ ಕಿತ್ತುಹೋಗಿ ಅಲ್ಲಲ್ಲಿ ಗುಂಡಿಗಳು ನಿರ್ಮಾಣವಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಸುಮಾರು ₹70 ಲಕ್ಷ ವೆಚ್ಚದಲ್ಲಿ ಕೈಗೊಂಡಿದ್ದ ರಸ್ತೆ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಡಾಂಬರು ಕಿತ್ತುಹೋಗಿರುವುದರಿಂದ ರಸ್ತೆಯ ಹಲವೆಡೆ ಗುಂಡಿಗಳು ಕಾಣಿಸಿಕೊಂಡಿದ್ದು, ವಾಹನ ಸವಾರರು ಸಂಚರಿಸಲು ಪರದಾಡುವಂತಾಗಿದೆ.
ಹೊಸದಾಗಿ ನಿರ್ಮಿಸಿದ ರಸ್ತೆ ಕೆಲವೇ ತಿಂಗಳಲ್ಲಿ ಹದಗೆಟ್ಟಿರುವುದು ಕಾಮಗಾರಿಯ ಗುಣಮಟ್ಟದ ಬಗ್ಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ರಸ್ತೆ ಹದಗೆಟ್ಟಿದ್ದರೂ ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸಿ, ಕಳಪೆ ಕಾಮಗಾರಿ ನಡೆಸಿರುವುದು ದೃಢಪಟ್ಟರೆ ಸಂಬಂಧಪಟ್ಟ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ, ಹೊಣೆಗಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ರಸ್ತೆ ಕಾಮಗಾರಿಗೆ ಬಳಸಲಾದ ಸಾಮಗ್ರಿಗಳ ಗುಣಮಟ್ಟ ಹಾಗೂ ಕಾಮಗಾರಿಯ ತಾಂತ್ರಿಕ ಅಂಶಗಳನ್ನು ಪರಿಶೀಲಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಜೊತೆಗೆ ರಸ್ತೆ ಗುಂಡಿಗಳನ್ನು ತಕ್ಷಣ ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.

