ಉಡುಪಿ: ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭೋವಿ ಸಮುದಾಯದವರಿಗೆ ಜಾತಿ ಪ್ರಮಾಣಪತ್ರ ನೀಡಲು ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದು, ಇದರಿಂದ ಸಮುದಾಯದ ಸಾವಿರಾರು ಮಂದಿ ತೊಂದರೆ ಅನುಭವಿಸುತ್ತಿದ್ದಾರೆ. ಈ ಸಮಸ್ಯೆಯನ್ನು ತಕ್ಷಣ ಪರಿಹರಿಸಬೇಕು ಎಂದು ಭೋವಿ ಸಮುದಾಯದ ಮುಖಂಡ ಪವನ್ ಕುಮಾರ್ ಶಿರ್ವ ಆಗ್ರಹಿಸಿದರು.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಪ್ರಮಾಣಪತ್ರ ನೀಡುವಲ್ಲಿ ಉಂಟಾಗುತ್ತಿರುವ ಸಮಸ್ಯೆ ಕುರಿತು ಮುಖ್ಯಮಂತ್ರಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವರಿಗೆ ಮನವಿ ಸಲ್ಲಿಸಲಾಗಿತ್ತು. ಈ ಸಂದರ್ಭದಲ್ಲಿ ಉಭಯ ಜಿಲ್ಲೆಗಳ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದರು ಎಂದರು.
ಸೆ.18ರಂದು ಮಂಗಳೂರಿನಲ್ಲಿ ಸಚಿವ ಸಂಪುಟದ ಸಭೆ ನಡೆಯಲಿದೆ. ಸಭೆಯಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಭಾಗವಹಿಸಲಿರುವುದರಿಂದ, ಮುಖ್ಯಮಂತ್ರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರು ಈ ಅವಕಾಶವನ್ನು ಬಳಸಿಕೊಂಡು ಭೋವಿ ಸಮುದಾಯಕ್ಕೆ ಜಾತಿ ಪ್ರಮಾಣಪತ್ರ ನೀಡುವಲ್ಲಿ ಎದುರಾಗಿರುವ ಸಮಸ್ಯೆ ಕುರಿತು ಚರ್ಚಿಸಬೇಕು. ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನೆಲೆಸಿರುವ ಸುಮಾರು 60ರಿಂದ 70 ಸಾವಿರ ಭೋವಿ ಸಮುದಾಯದ ಜನರಿಗೆ ಈ ಸಮಸ್ಯೆಯಿಂದ ಪರಿಹಾರ ದೊರಕುವಂತಾಗಬೇಕು. ಜಾತಿ ಪ್ರಮಾಣಪತ್ರ ಪಡೆಯಲು ಇರುವ ತೊಂದರೆಗಳನ್ನು ನಿವಾರಿಸಿ, ಅರ್ಹರಿಗೆ ನಿಯಮಾನುಸಾರ ಪ್ರಮಾಣಪತ್ರ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಪವನ್ ಕುಮಾರ್ ಶಿರ್ವ ಆಗ್ರಹಿಸಿದರು.

