ಉಡುಪಿ: ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ಮಂಗಳೂರು ವಿಭಾಗದ ವತಿಯಿಂದ 2026ನೇ ಸಾಲಿನ ‘ಅಧ್ಯಾಪಕ ಭೂಷಣ ಪ್ರಶಸ್ತಿ’ ಪ್ರದಾನ ಸಮಾರಂಭ ಸೆಪ್ಟೆಂಬರ್ 26ರಂದು ಮಧ್ಯಾಹ್ನ 2ಗಂಟೆಗೆ ಉಡುಪಿಯ ಕಿದಿಯೂರು ಹೋಟೆಲ್‌ನ ಮಾಧವ ಕೃಷ್ಣ ಸಭಾಭವನದಲ್ಲಿ ನಡೆಯಲಿದೆ.
ತ್ರಿಷಾ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳ ಅಧ್ಯಾಪಕರ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ರಾಜ್ಯ ಜಂಟಿ ಕಾರ್ಯದರ್ಶಿ ಡಾ. ಮಾಧವ ಎಂ.ಕೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಶಿಕ್ಷಣ ಕ್ಷೇತ್ರದ ಜೀವಮಾನದ ಸಾಧನೆಗಾಗಿ ಕರಾವಳಿಯ ಸಾಂಸ್ಕೃತಿಕ ರಾಯಭಾರಿ ಹಾಗೂ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅವರನ್ನು ಆಯ್ಕೆ ಮಾಡಲಾಗಿದೆ.
ಅತ್ಯುತ್ತಮ ಆಡಳಿತಗಾರರು: ತ್ರಿಷಾ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಸಿ.ಎ. ಗೋಪಾಲಕೃಷ್ಣ ಭಟ್, ಗೋವಿಂದ ದಾಸ ಕಾಲೇಜಿನ ಆಡಳಿತ ನಿರ್ದೇಶಕ ಪ್ರೊ. ರಮೇಶ್ ಭಟ್ ಎಸ್.ಜಿ. ಹಾಗೂ ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಪದ್ಮನಾಭ ಎಸ್.
ಅತ್ಯುತ್ತಮ ಸಂಶೋಧಕರು: ಮಂಗಳೂರು ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದ ಅಧ್ಯಕ್ಷ ಡಾ. ಭೋಜ ಪೂಜಾರಿ ಹಾಗೂ ಸಿದ್ಧಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಅಜಕ್ಕಳ ಗಿರೀಶ್ ಭಟ್.
ಅತ್ಯುತ್ತಮ ಶಿಕ್ಷಕರು: ಪುತ್ತೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಸುಬ್ಬಪ್ಪ ಕೈಕಂಬ, ಬಂಟ್ವಾಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಕಾಶ್ ಚಂದ್ರ ಶಿಶಿಲ ಹಾಗೂ ಮಂಗಳೂರಿನ ಬೆಸೆಂಟ್ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ. ಪ್ರವೀಣ್ ಕೆ.ಸಿ.
ಅತ್ಯುತ್ತಮ ಗ್ರಂಥಪಾಲಕರು: ಉಜಿರೆಯ ಎಸ್‌ಡಿಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಗ್ರಂಥಪಾಲಕ ಡಾ. ರಜತ ಪಿ. ಶೆಟ್ಟಿ ಹಾಗೂ ವಿರಾಜಪೇಟೆಯ ಕಾವೇರಿ ಕಾಲೇಜಿನ ಗ್ರಂಥಪಾಲಕ ಡಾ. ಮುತ್ತಮ್ಮ ಎ.ಆರ್.
ಅತ್ಯುತ್ತಮ ದೈಹಿಕ ಶಿಕ್ಷಕರು: ಕಾರ್ಕಳದ ಮಂಜುನಾಥ ಪೈ ಮಂಜು ಸ್ಮಾರಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕಿ ಡಾ. ಜಯಭಾರತಿ ಎ. ಹಾಗೂ ಮಡಿಕೇರಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಪ್ರೊ. ರಾಕಿ ಪೂವಣ್ಣ ಅವರನ್ನು ಆಯ್ಕೆ ಮಾಡಲಾಗಿದೆ.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಕ್ಷೇತ್ರಿಯ ಕಾರ್ಯವಾಹ ಎನ್. ತಿಪ್ಪೇಸ್ವಾಮಿ, ಕೇಂದ್ರ ಸಚಿವ ವಿ. ಸೋಮಣ್ಣ, ಉಡುಪಿ ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಪಿ.ಎಲ್. ಧರ್ಮ ಹಾಗೂ ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ್ ಸಂಗಪ್ಪ ಅಲೂರು ಸೇರಿದಂತೆ ಗಣ್ಯರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕೆಆರ್‌ಎಂಎಸ್‌ನ ಅಧ್ಯಕ್ಷ ಡಾ. ಗುರುನಾಥ ಬಡಿಗೇರ್ ಉಪಸ್ಥಿತರಿರಲಿದ್ದಾರೆ ಎಂದು ಅವರು ತಿಳಿಸಿದರು.
ಸೆ.26ರಂದು ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರದಾನ ಸಮಾರಂಭ

