ಉಡುಪಿ: ಕರಾವಳಿಯ ಪ್ರಮುಖ ಧಾರ್ಮಿಕ ಹಾಗೂ ಸಾಂಸ್ಕೃತಿಕ ಉತ್ಸವಗಳಲ್ಲಿ ಒಂದಾಗಿರುವ ಐದನೇ ವರ್ಷದ ಉಡುಪಿ ಉಚ್ಚಿಲ ದಸರಾ-2026ಕ್ಕೆ ಭಾನುವಾರ ಅದ್ದೂರಿ ಚಾಲನೆ ದೊರೆಯಿತು. ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ವತಿಯಿಂದ ಅ. 11ರಿಂದ 21ರವರೆಗೆ ನಡೆಯಲಿರುವ ಉತ್ಸವಕ್ಕೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಚಾಲನೆ ನೀಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರ್ಕಾರ ಹಾಗೂ ಭಕ್ತಾಭಿಮಾನಿಗಳ ಸಹಕಾರದೊಂದಿಗೆ ಶ್ರೀ ಕ್ಷೇತ್ರ ಉಚ್ಚಿಲದ ಶ್ರೀಮತಿ ಶಾಲಿನಿ ಡಾ. ಜಿ. ಶಂಕರ್ ಸಭಾಂಗಣದಲ್ಲಿ 11 ದಿನಗಳ ಕಾಲ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಕಳೆದ ನಾಲ್ಕು ವರ್ಷಗಳಲ್ಲಿ ಜನಮನ್ನಣೆ ಗಳಿಸಿರುವ ಉತ್ಸವವು ಐದನೇ ವರ್ಷಕ್ಕೆ ಕಾಲಿಟ್ಟಿದ್ದು, ಈ ಬಾರಿಯೂ ವೈಭವದ ಆಚರಣೆಗೆ ಸಜ್ಜಾಗಿದೆ.

ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ನವರಾತ್ರಿ ಹಬ್ಬವು ನಮ್ಮಲ್ಲಿರುವ ಧೈರ್ಯ, ಶಕ್ತಿ ಮತ್ತು ಜ್ಞಾನವನ್ನು ಜಾಗೃತಗೊಳಿಸಿ, ನಮ್ಮ ಸಾಮರ್ಥ್ಯವನ್ನು ಗುರುತಿಸಿಕೊಳ್ಳಲು ಪ್ರೇರಣೆ ನೀಡುತ್ತದೆ. ದೇವಿಯ ಆರಾಧನೆಯ ಮೂಲಕ ಆಶೀರ್ವಾದ ಪಡೆದು ಜೀವನದಲ್ಲಿ ಸಕಾರಾತ್ಮಕತೆ ಹಾಗೂ ಆತ್ಮವಿಶ್ವಾಸ ಬೆಳೆಸಿಕೊಳ್ಳಬಹುದು. ನಮ್ಮೊಳಗಿನ ಶಕ್ತಿಯನ್ನು ಅರಿತು ಅದನ್ನು ಸದುಪಯೋಗಪಡಿಸಿಕೊಳ್ಳುವ ಸಂಕಲ್ಪದೊಂದಿಗೆ ದೇವಿಯ ಕೃಪೆಗೆ ಪಾತ್ರರಾಗೋಣ ಎಂದರು.
ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಮಾತನಾಡಿ, 2021ರಲ್ಲಿ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಹೊಸ ರೂಪ ನೀಡಲಾಗಿದ್ದು, ನಾಡೋಜ ಡಾ. ಜಿ. ಶಂಕರ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಉಚ್ಚಿಲ ದಸರಾ ಇಂದು ವಿಶೇಷ ಖ್ಯಾತಿ ಗಳಿಸಿದೆ. ನವರಾತ್ರಿಯ ಪವಿತ್ರ ದಿನಗಳಲ್ಲಿ ದೇವಿಯ ಆರಾಧನೆ ಮಾಡಿ, ಆಕೆಯ ಕೃಪೆಗೆ ಪಾತ್ರರಾಗೋಣ. ದೇವಿಯು ಎಲ್ಲರಿಗೂ ಆಯುರಾರೋಗ್ಯ, ಸುಖ, ಶಾಂತಿ ಮತ್ತು ಸಮೃದ್ಧಿ ಕರುಣಿಸಲಿ ಎಂದು ಹಾರೈಸಿದರು.

ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ, ಮೈಸೂರು, ಮಂಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದಸರಾ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಉಡುಪಿ ಜಿಲ್ಲೆಯಲ್ಲಿ ಅದ್ದೂರಿ ದಸರಾ ಆಚರಣೆಯ ಕೊರತೆಯನ್ನು ನೀಗಿಸುವ ಉದ್ದೇಶದಿಂದ ನಾಡೋಜ ಡಾ. ಜಿ. ಶಂಕರ್ ಅವರ ನೇತೃತ್ವದಲ್ಲಿ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ದಸರಾ ಉತ್ಸವವನ್ನು ವೈಭವದಿಂದ ಆಚರಿಸಲಾಗುತ್ತಿದೆ ಎಂದರು.
ಉಚ್ಚಿಲ ದಸರಾ ಪ್ರತಿವರ್ಷ ಹುಣ್ಣಿಮೆಯ ಚಂದ್ರನಂತೆ ಕಳೆಗಟ್ಟುತ್ತಿದ್ದು, ವರ್ಷದಿಂದ ವರ್ಷಕ್ಕೆ ಉತ್ಸವದ ಸಂಭ್ರಮ ಹೆಚ್ಚುತ್ತಿದೆ. ಧಾರ್ಮಿಕ ಆಚರಣೆಗಳ ಜತೆಗೆ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಉತ್ಸವ ಕರಾವಳಿಯ ಜನರ ಗಮನ ಸೆಳೆಯುತ್ತಿದೆ ಎಂದು ಹೇಳಿದರು.
ಅ. 12ರಂದು ನಡೆಯಲಿರುವ ಮಹಿಳಾ ದಸರಾ ಕಾರ್ಯಕ್ರಮವನ್ನು ಉದ್ಘಾಟಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಬೇಕಿತ್ತು. ಆದರೆ, ತುರ್ತು ಕೆಲಸದ ನಿಮಿತ್ತ ದೆಹಲಿಗೆ ತೆರಳಬೇಕಾಗಿರುವುದರಿಂದ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಅ. 21ರೊಳಗೆ ಉಚ್ಚಿಲಕ್ಕೆ ಭೇಟಿ ನೀಡುವುದಾಗಿ ಅವರು ತಿಳಿಸಿದ್ದಾರೆ ಎಂದು ವಿನಯ್ ಕುಮಾರ್ ಸೊರಕೆ ಮಾಹಿತಿ ನೀಡಿದರು.

ಉಚ್ಚಿಲ ದಸರಾ ರೂವಾರಿ ನಾಡೋಜ ಡಾ. ಜಿ. ಶಂಕರ್ ಪ್ರಾಸ್ತಾವಿಕವಾಗಿ ಮಾತನಾಡಿ, ಉತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳ ವಿವರ ನೀಡಿದರು. ದಸರಾ ವಸ್ತುಪ್ರದರ್ಶನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಚಾಲನೆ ನೀಡಿದರು.
ಉಚ್ಚಿಲ ದಸರಾ ರೂವಾರಿ ನಾಡೋಜ ಡಾ. ಜಿ. ಶಂಕರ್ ಪ್ರಾಸ್ತಾವಿಕವಾಗಿ ಮಾತನಾಡಿ, ಉತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳ ವಿವರ ನೀಡಿದರು. ದಸರಾ ವಸ್ತುಪ್ರದರ್ಶನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ದಸರಾ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಕರ್ಕೇರ, ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಪದಾಧಿಕಾರಿಗಳಾದ ಗಿರಿಧರ್ ಎಸ್. ಸುವರ್ಣ, ಸತೀಶ್ ಅಮೀನ್ ಪಡುಕೆರೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.



